

ಹೊಸಪೇಟೆ: ಪಹಣಿ ಪತ್ರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಏ.21 ಮತ್ತು 22ರಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ (ಹಿಂದುಳಿದ ವರ್ಗಗಳ ಪ್ರವರ್ಗ -1) ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯಾದಾದ್ಯಂತ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ 46 ಜಾತಿಗಳಿವೆ. ಸುಮಾರು ವರ್ಷಗಳಿಂದ ಬೀದಿ ಬದಿಗಳಲ್ಲಿ ಸರ್ಕಾರಿ, ಖಾಸಗಿ ಖಾಲಿ ಸ್ಥಳಗಳಲ್ಲಿ ವಾಸ ಮಾಡುತ್ತಿದ್ದೆವೆ. ಚಿಕ್ಕಮಕ್ಕಳಿಂದ ಹಿಡಿದು ವಯೋ ವೃದ್ಧರ ತನಕ ಗುಡಿಸಲು-ಗುಡಾರಗಳನ್ನು ಕಟ್ಟಿಕೊಂಡು ಶೋಚನೀಯ ಸ್ಥಿತಿಯಲ್ಲಿ ಕಷ್ಟಕರ ಜೀವನವನ್ನು ನಡೆಸುತ್ತಿದ್ದಾರೆ. ಸರ್ಕಾರಕ್ಕೆ ಹಲವಾರು ಬಾರಿ ಈ ಬಗ್ಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಶಾಂತಿಯುತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸಮುದಾಯ ಭವನಗಳನ್ನು ನಿರ್ಮಿಸುವುದು. ವಸತಿ ಶಾಲೆಗಳನ್ನು ತೆರೆಯುವುದು, ಖಾಸಗಿ ಕಾಲೇಜುಗಳಲ್ಲಿ ಉಚಿತವಾಗಿ ಹಾಗೂ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು. ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಕೂಡಲೇ ನೇಮಕಾತಿ ಮಾಡಬೇಕು. ನೀಟ್, ಸಿಇಟಿ ಪರೀಕ್ಷೆಗೆ ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ ನೀಡುವ ಮಾನದಂಡವನ್ನು ನಮ್ಮ ವಿದ್ಯಾರ್ಥಿಗಳಿಗೂ ನೀಡಬೇಕು. 46 ಜಾತಿಗಳ ಕುಲಶಾಸ್ತ್ರಿ ಅಧ್ಯಯನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜಾತಿ ಆದಾಯ ಮತ್ತು ಮರಣ ಪ್ರಮಾಣ ಪತ್ರ ನೀಡುವಾಗ ಸರಿಯಾದ ಹೆಸರು, ಜಾತಿ, ಜನಾಂಗವನ್ನು ನಮೂದಿಸಿ ನೀಡಬೇಕು. ಭೂ ಖರೀದಿ ಯೋಜನೆಯಲ್ಲಿ ಮಂಜೂರಾದ ಸಾಲಕ್ಕೆ ಶೇಕಡಾ 25ರಷ್ಟು ಸಬ್ಸಿಡಿ ಒದಗಿಸಬೇಕು. ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಗಾಗಿ ವಾರ್ಷಿಕವಾಗಿ 500ಕೋಟಿ ಅನುದಾನ ಒದಗಿಸಬೇಕು. ಶಿಕ್ಷಣ ಮತ್ತು ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.