ಸೇವಾಲಾಲ್ ದೇಶ ಕಂಡ ಮಹಾನ್ ಸಂತ

15 MANJU 04
Published on
ಹೊಸಪೇಟೆ: ಈ ನಮ್ಮ ದೇಶದ ನೆಲ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿದ್ದು, ಈ ನೆಲದಲ್ಲಿ ಹಲವು ಸಂತರು, ಧರ್ಮ ಸುಧಾರಕರು, ತತ್ವಜ್ಞಾನಿಗಳು ಜನ್ಮ ತಾಳಿ ಜನರಲ್ಲಿನ ತಮಂಧತೆಯನ್ನು ಹೋಗಲಾಡಿಸಿದ್ದಾರೆ. ಇಂತಹ ಮಹಾನ್ ಸಂತರುಗಳಲ್ಲಿ ಲಂಬಾಣಿ ಸಮುದಾಯದ ಆರಾಧ್ಯ ದೈವ ಸದ್ಗುರು ಸಂತ ಸೇವಾಲಾಲ್ ಮಹಾರಾಜರು ಒಬ್ಬರು ಎಂದರು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.
ನಗರದ ಜಿಲ್ಲಾಧಿಕಾರಿ‌ ಕಚೇರಿಯಲ್ಲಿ ಶನಿವಾರ ಸಂತ ಸೇವಾಲಾಲ್ ಮಹಾರಾಜ ಜಯಂತಿ‌ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನವನ್ನು ಪಡೆದರು. ಅಲ್ಲದೇ ಜಗದಂಬೆಯ ಆರಾಧಕರಾಗಿ ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದರು. 18ನೇ ಶತಮಾನದಲ್ಲಿ ಲಂಬಾಣಿ ಜನಾಂಗದ ಹಕ್ಕಿಗಾಗಿ ಆಗಿನ ನಿಜಾಮರು ಹಾಗೂ ಮೈಸೂರು ಅರಸರೊಂದಿಗೆ ಹೋರಾಟವನ್ನು ಮಾಡಿದರು. ಅಷ್ಟೇ ಅಲ್ಲದೆ ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರು. ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು. ಇಂತಹ ಮಹನೀಯರನ್ನು ಒಂದು ಜಾತಿ ಅಥವಾ ಧರ್ಮಕ್ಕೆ ಮೀಸಲಾಗಿಸದೇ ಸರ್ವರ ಸಾಂಸ್ಕೃತಿಕ ಹಾಗೂ ಧಾರ್ಮಿಕ ರಾಯಭಾರಿಗಳಾಗಿ ಸ್ವೀಕರಿಸಿದಾಗ ಮಾತ್ರವೇ ಸಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net