ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ: ಬಿಜೆಪಿ ಆರೋಪ

31 MANJU 05
Published on

ಹೊಸಪೇಟೆ: ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡಿರುವ ರಸಗೊಬ್ಬರವನ್ನು ರಾಜ್ಯ ಸರ್ಕಾರ ರೈತರಿಗೆ ಸರಿಯಾಗಿ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ತಹಸೀಲ್ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಬಿಜೆಪಿ ಕಚೇರಿಯಿಂದ ಪ್ರತಿಭಟನ ರ‍್ಯಾಲಿ ನಡೆಸಿ, ತಹಸೀಲ್ ಕಚೇರಿ ಮುಂದೆ ಸಮಾವೇಶಗೊಂಡ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರೈತರಿಗೆ ಬೇಡಿಕೆಯಷ್ಟು ಯೂರಿಯಾ ಗೊಬ್ಬರ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಕಾಳಸಂತೆಯಲ್ಲಿ ಅದನ್ನು ಮಾರಲಾಗುತ್ತಿದೆ ಎಂದು ದೂರಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾಲಿ ಸಿದ್ದಯ್ಯಸ್ವಾಮಿ ಮಾತನಾಡಿ, ಕಳೆದೆರಡು ವರ್ಷಗಳಲ್ಲಿ ರಾಜ್ಯದ ವಿವಿಧೆಡೆ ಶೇ.30ರಿಂದ 40ರಷ್ಟು ಮಳೆ ಕೊರತೆಯಾಗಿತ್ತು. ಹಾಗಾಗಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆಯೂ ಕಡಿಮೆ ಇತ್ತು. ಈ ವರ್ಷ ಪೂರ್ವ ಮತ್ತು ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ, ಯೂರಿಯಾ ದುರುಪಯೋಗ ಪಡಿಸಿಕೊಂಡು ಕಾಳಸಂತೆಯಲ್ಲಿ ಮಾರುತ್ತಿರುವುದು ಬಹಿರಂಗವಾಗಿದೆ ಎಂದು ಆಪಾದಿಸಿದರು.

ಓಬಿಸಿ ರಾಜ್ಯ ಉಪಾಧ್ಯಕ್ಷ ಅಯ್ಯಳಿ ತಿಮ್ಮಪ್ಪ ಮಾತನಾಡಿ, ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಸರಬರಾಜು ಆಗುತ್ತಿರುವ ಬಿತ್ತನೆ ಬೀಜ ಕಳಪೆಯಾಗಿದ್ದು, ಇಳುವರಿ ಮೇಲೆ ಪೆಟ್ಟು ಬಿದ್ದಿದೆ. ರಾಜ್ಯದಲ್ಲಿ ನಕಲಿ ರಸಗೊಬ್ಬರ ಕಂಪನಿಗಳು ತಲೆ ಎತ್ತಿವೆ ಎಂದು ಆರೋಪಿಸಿದರು.

ಯುಮೋರ್ಚಾ ಜಿಲ್ಲಾ ಅಧ್ಯಕ್ಷ ಕಿಚಡಿ ಕೊಟ್ರೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿAದಲೂ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಲ್ಯಾಣಕ್ಕಾಗಿ ಹಿಂದಿನ ಬಿಜೆಪಿ ಸರ್ಕಾರ ರೂಪಿಸಿದ್ದ ರೈತ ವಿದ್ಯಾನಿಧಿ ಯೋಜನೆ, ಕೃಷಿ ಉಪಕರಣಗಳಿಗೆ ಸಬ್ಸಿಡಿ ಮತ್ತು ರಾಗಿ ಕೃಷಿಗೆ ಬೆಂಬಲ ಬೆಲೆ ಮತ್ತಿತರ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲು ಕೊಡುತ್ತಿಲ್ಲ ಎಂದು ದೂರಿದರು.

ಪ್ರಧಾನ ಕಾರ್ಯದರ್ಶಿರಾದ ಕೆ.ಎಸ್.ವಿದ್ವಾನ್, ಕೆ.ಎಸ್.ರಾಘವೇಂದ್ರ, ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಕಸಾಟ್ಟಿ ಉಮಾಪತಿ, ಕಿಚಡಿ ಕೊಟ್ರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net