ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ

hospital
Published on

ಮಡಿಕೇರಿ:

ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮರ್ಥ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಶುಕ್ರವಾರ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದ್ದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವುದು ವೈದ್ಯರ ಜವಾಬ್ದಾರಿ.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೆರಿಸುವಲ್ಲಿ ಶಾಸಕದ್ವಯರು ಶ್ರಮಿಸಿದ್ದಾರೆ. ಆ ದಿಸೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ಆರೋಗ್ಯ ಸೇವೆಗಳು ತಲುಪಬೇಕು. ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳು ಸಕಾಲದಲ್ಲಿ ತಲುಪಿದಾಗ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ವೈದ್ಯಕೀಯ ವಿಜ್ಞಾನ ಸಚಿವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಪ್ರಯತ್ನಿಸಿದ್ದಾರೆ ಎಂದರಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ವಿಭಾಗಕ್ಕೆ 1,250 ಕೋಟಿ ರೂ. ನೀಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎನ್ನುವ ಒತ್ತಾಯ ಹಲವು ವರ್ಷಗಳಿಂದ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು, ಅದು ಈಗ ಈಡೇರಿದಂತಾಗಿದೆ. ಜಿಲ್ಲೆಯಲ್ಲಿ ಎಲ್ಲರ ಪ್ರಯತ್ನದಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿದ್ದು, ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪಬೇಕು ಎಂದು ಹೇಳಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ಜನ ಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಅದೇ ರೀತಿ ಆಸ್ಪತ್ರೆಗೆ ಬರುವವರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ಒದಗಿಸುವುದು ವೈದ್ಯರ ಕರ್ತವ್ಯ. ಅದನ್ನು ಅರಿತು ಕಾರ್ಯ ನಿರ್ವಹಿಸಬೇಕು. ವೈದ್ಯರು ರೋಗಿಯ ಆರೋಗ್ಯ ಸರಿಯಾಗಿ ಉಪಚರಿಸಬೇಕು. ಇದರಿಂದ ರೋಗಿಯ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಾಣಬಹುದಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ವಿಭಾಗ ಸೇರಿದಂತೆ ಹಲವು ವಿಭಾಗಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಇಲ್ಲಿನ ಆಸ್ಪತ್ರೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು. ಕಾರ್ಡಿಯಾಲಜಿ ವಿಭಾಗದಲ್ಲಿಯೂ ಸಹ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು.

ಖಾಯಂ ವೈದ್ಯರ ನೇಮಕಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೇಲ್ದರ್ಜೆಗೇರುವ ಕಾಮಗಾರಿ 18 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಗುಣಮಟ್ಟದ ಹಾಗೂ ಇಲ್ಲಿನ ವಾತಾವರಣಕ್ಕೆ ತಕ್ಕಂತೆ ಕಾಮಗಾರಿ ಕೈಗೊಳ್ಳಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ ಇನ್ನೂ 20 ಕೋಟಿ ರೂ. ಒದಗಿಸಲು ಪ್ರಯತ್ನಿಸಲಾಗುವುದು. ಹಾಗೆಯೇ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಕ್ಕೂ ಕ್ರಮವಹಿಸಲಾಗುದು ಎಂದರು.

ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಟಿ.ಎಂ. ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಎ.ಜೆ. ಲೋಕೇಶ್, ಡಾ.ವಿಶಾಲ್ ಕುಮಾರ್, ಡಾ.ನಂಜುAಡಯ್ಯ, ಡಾ.ಸತೀಶ್, ಡಾ.ಸೋಮಶೇಖರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net