

ಮಂಡ್ಯ: ತಾಲೂಕಿನ ಬಿ.ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ರವಿಕುಮಾರ್ ಗಣಿಗ ದಿಢೀರ್ ಭೇಟಿ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಅಧಿಕಾರಿ, ಸಿಬ್ಬಂದಿಯ ಕಾರ್ಯವೈಖರಿ ಪರಿಶೀಲಿಸಿ ರೋಗಿಗಳಿಂದ ಅಹವಾಲು ಸ್ವೀಕರಿಸಿದರು. ಆಸ್ಪತ್ರೆಯ ವಾರ್ಡ್‌ಗಳನ್ನು ವೀಕ್ಷಿಸಿದ ಶಾಸಕರು ರೋಗಿಗಳಿಗೆ ತೊಂದರೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಖಡಕ್ ಸೂಚನೆ ನೀಡಿದರು. ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ ಪುಸ್ತಕ ಪರಿಶೀಲಿಸಿ ಆರೋಗ್ಯ ಕಾರ್ಯಕರ್ತೆಯರ ಜತೆ ಸಮಾಲೋಚನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇನ್ನಿತರ ಆರೋಗ್ಯ ಕೇಂದ್ರಗಳು, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಜನ ಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.