

ಮದ್ದೂರು: ಪಟ್ಟಣದ ಕೊಲ್ಲಿ ಸರ್ಕಲ್ ಬಳಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹೋಟೆಲ್ ನೌಕರನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹಣ ಮತ್ತು ಮೊಬೈಲ್ ದೋಚಿದ್ದಾರೆ.
ಜೀವನ್ (22) ತೀವ್ರವಾಗಿ ಗಾಯಗೊಂಡ ನೌಕರ. ಪಟ್ಟಣದ ಪೇಟೆಬೀದಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಜೀವನ್ ಮಂಗಳವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಘಟನೆ ವಿವರ: ತಾಲೂಕಿನ ಚಾಮನಹಳ್ಳಿ ಗ್ರಾಮದ ಜೀವನ್ ಮಂಗಳವಾರ ರಾತ್ರಿ 11.30 ಸುಮಾರಿಗೆ ಹೋಟೆಲ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕೊಲ್ಲಿ ಸರ್ಕಲ್ ಬಳಿ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಜೀವನ್ ಮೇಲೆ ದಾಳಿ ನಡೆಸಿ ಅವರ ಜೇಬಿನಲ್ಲಿದ್ದ ಹಣ ಮತ್ತು ಮೊಬೈಲ್ ಲೂಟಿ ಮಾಡಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಜೀವನ್ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡು ಮತ್ತು ದೊಣ್ಣೆಗಳಿಂದ ಹಲ್ಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹೋಟೆಲ್ ನೌಕರರು ಹಾಗೂ ಸಾರ್ವಜನಿಕರು ತಲೆ ಮತ್ತು ಕೈಗೆ ತೀವ್ರವಾಗಿ ಪೆಟ್ಟು ಬಿದ್ದು ರಸ್ತೆಬದಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಜೀವನ್ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.
ಜೀವನ್ ಸಂಬಂಧಿ ಶಿವೇಂದ್ರ ಕುಮಾರ್ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ದುಷ್ಕರ್ಮಿಗಳ ಪತ್ತೆಗೆ ಶೋಧಕಾರ್ಯ ನಡೆಸಿದ್ದಾರೆ.