ಹುಬ್ಬಳ್ಳಿಯಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ 29ರಂದು

h2-jameer ahammedkhan
Published on

ಹುಬ್ಬಳ್ಳಿ: ರಾಜ್ಯಾದ್ಯಂತ ನಿರ್ಮಿಸಿರುವ ಮನೆಗಳ ಹಸ್ತಾಂತರ ಕಾರ್ಯಕ್ರಮ ಹುಬ್ಬಳ್ಳಿಯ ಮಂಟೂರ ರಸ್ತೆಯ ಹೊಸ ಯಲ್ಲಾಪೂರ ಬಳಿ ನ. 29ರಂದು ನಡೆಯಲಿದೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಅವರು ಆಗಮಿಸಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ತಿಳಿಸಿದರು.

ನಗರದ ಮಂಟೂರು ರಸ್ತೆಯ ಹೊಸ ಯಲ್ಲಾಪುರ ಬಳಿ ರಾಜ್ಯ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿರುವ ಆಶ್ರಯ ಮನೆಗಳನ್ನು ಭಾನುವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನ. 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ. ಅವರ ಜತೆಗೆ ನಾನು ಮತ್ತು ಶಾಸಕ ಪ್ರಸಾದ ಅಬ್ಬಯ್ಯ ಅವರು ತೆರಳಿ ರಾಹುಲ್ ಗಾಂಧಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇವೆ ಎಂದರು.

ಮೊದಲ ಹಂತದಲ್ಲಿ 30789 ಮನೆಗಳನ್ನು ಹಸ್ತಾಂತರ ಮಾಡಲಾಗಿದೆ. ಎರಡನೇ ಹಂತದಲ್ಲಿ ಒಟ್ಟು 42,345 ಮನೆಗಳ ಹಸ್ತಾಂತರ ಪ್ರಕ್ರಿಯೆ 29ರಂದು ನಡೆಯಲಿದೆ. ಮೂರನೇ ಹಂತದಲ್ಲಿ 30 ಸಾವಿರ ಮನೆಗಳನ್ನು ನೀಡಲಾಗುವುದು. ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್‌ಗಾಂಧಿ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲಾಗಿದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದೂ ಮನೆಯನ್ನು ಕೊಟ್ಟಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗೆ ಅನುದಾನ ಮೀಸಲಿಟ್ಟಿದೆ. ಬಡವರು ಕಟ್ಟಿಸಿಕೊಳ್ಳುವ ಮನೆಗಳಿಗೂ ಅನುದಾನ ಕೊಡುವಂತೆ ಧೈರ್ಯ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದೆ. ಅದಕ್ಕೂ ಅವರು ಅನುದಾನ ನೀಡಿದ್ದಾರೆ. ಇದು 6 ನೇ ಗ್ಯಾರಂಟಿ ಎಂದರು.

ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ, ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ, ಪಾಲಿಕೆ ಪ್ರತಿಪಕ್ಷ ನಾಯಕ ಇಮ್ರಾನ್ ಯಲಿಗಾರ, ಹೆಸ್ಕಾಂ ಅಧ್ಯಕ್ಷ ಅಜೀಂ ಪೀರ ಖಾದ್ರಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಸದಾನಂದ ಡಂಗನವರ ಇತರರು ಇದ್ದರು.

ಇದಕ್ಕೂ ಮೊದಲು ಗದಗ ರಸ್ತೆ, ಗಣೇಶ ಪೇಟೆ, ಸೆಟ್ಲಮೆಂಟ್ ಏರಿಯಾದಲ್ಲಿ ಯುವಕರು ಬೈಕ್ ರ‌್ಯಾಲಿ ನಡೆಸಿ ಸಚಿವ ಜಮೀರ್ ಅಹ್ಮದ್‌ಖಾನ್ ಅವರನ್ನು ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net