ಡೆಂಘೆ ನಿಯಂತ್ರಿಸಲು ಬಿಬಿಎಂಪಿಯಿಂದ ಮನೆ-ಮನೆ ಸಮೀಕ್ಷೆ

denge meeting
Published on

ಬೆಂಗಳೂರು: ಮಹಾನಗರದಲ್ಲಿ ಡೆಂಘೆ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೆ ಪ್ರಕರಣ ನಿಯಂತ್ರಿಸುವ ಸಂಬಂಧ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್‌ಎಂಗಳು ಹಾಗೂ ಲಿಂಕ್ ವರ್ಕರ್ಸ್‌ಗಳು ಸೇರಿ 1,000 ಮನೆಗಳಿಗೊಂದು ಬಾಕ್‌ಅನ್ನು ರಚಿಸಿಕೊಳ್ಳಬೇಕು. ನಂತರ ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು, ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸುವುದು ಸೇರಿ ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ 2024ರ ಜನವರಿಯಿಂದ ಜೂನ್‌ವರೆಗೆ 1,230 ಪ್ರಕರಣಗಳು ಕಂಡುಬಂದಿದ್ದು, ವಲಯವಾರು ಮೈಕ್ರೋ ಪ್ಲಾನ್ ಮಾಡಿಕೊಂಡು ಡೆಂಘೆ ಹರಡುವಿಕೆಯನ್ನು ನಿಯಂತ್ರಿಸಲು ಸೂಚಿಸಲಾಗಿದೆ. ಜತೆಗೆ ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಚಟುವಟಿಕೆಗಳನ್ನು ಹೆಚ್ಚಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಎನ್.ಎಸ್ 1 ಟೆಸ್ಟ್ ಕಿಟ್ ಮೂಲಕ ಡೆಂಘೆ ಪರೀಕ್ಷೆ:

ನಗರದಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರ ಪ್ರಕರಣಗಳು ಕಂಡುಬಂದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎನ್.ಎಸ್ 1 ಟೆಸ್ಟ್ ಕಿಟ್ ಮೂಲಕ ಪರೀಕ್ಷೆ ಮಾಡಿ ಖಚಿತವಾದ ಬಳಿಕ ರಕ್ತದ ಮಾದರಿ ಸಂಗ್ರಹಿಸಿಕೊಂಡು ಪ್ರಯೋಗಾಲಯಗಳಿಗೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯ ಆಯುಕ್ತರು ಸ್ಪಷ್ಟಪಡಿಸಿದರು.

ಈ ವೇಳೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ.ಹರೀಶ್ ಕುಮಾರ್, ವಲಯ ಆಯುಕ್ತರಾದ ಆರ್.ಎಲ್ ದೀಪಕ್ ರಮೇಶ್, ವಿನೋತ್ ಪ್ರಿಯಾ, ರಮ್ಯಾ, ಕರೀಗೌಡ, ರಮ್ಯಾ, ಎಲ್ಲ ವಲಯದ ಜಂಟಿ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

15 ದಿನಕ್ಕೊಮ್ಮೆ ಮನೆ-ಮನೆ ಭೇಟಿ:

ಪಾಲಿಕೆ ವ್ಯಾಪ್ತಿಯಲ್ಲಿನ 28 ಲಕ್ಷ ಮನೆಗಳ ಪೈಕಿ 14 ಲಕ್ಷ ಮನೆಗಳು ಬಡ ವರ್ಗವಿರುವ ಪ್ರದೇಶ, ಜನಸಂಖ್ಯೆ ಹೆಚ್ಚಿರುವ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿರುವ 14 ಲಕ್ಷ ಮನೆಗಳಿಗೆ 15 ದಿನಕ್ಕೊಮ್ಮೆ ಭೇಟಿ ನೀಡಿ ಲಾರ್ವಾ ಉತ್ಪತ್ತಿ ತಾಣಗಳು ಹಾಗೂ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುವುದು. ಇದಕ್ಕಾಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳಲಾಗುತ್ತದೆ.

ಇಲಾಖೆಗಳೊಂದಿಗೆ ಸಮನ್ವಯ:

ಡೆಂಘೆ ಪ್ರಕರಣಗಳನ್ನು ನಿಯಂತ್ರಿಸಲು ಮನೆ-ಮನೆಗಳಿಗೆ ಭೇಟಿ ನೀಡುವ ಜತೆಗೆ ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಘನತ್ಯಾಜ್ಯ, ಬೃಹತ್ ನೀರುಗಾಲುವೆ, ರಸ್ತೆ ಮೂಲಸೌಕರ್ಯ ವಿಭಾಗ ಸೇರಿ ಇನ್ನಿತರ ಇಲಾಖೆಗಳೊಂದಿಗೆ ವಲಯವಾರು ಸಮನ್ವಯ ಸಾಧಿಸಿ ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ವಲಯವಾರು ಡೆಂಘೆ ಪ್ರಕರಣಗಳ ವಿವರ (2024ರ ಜನವರಿಯಿಂದ ಇದುವರೆಗೆ):

ಬೊಮ್ಮನಹಳ್ಳಿ -122

ಪೂರ್ವ -218

ಮಹದೇವಪುರ -386

ಆರ್.ಆರ್. ನಗರ -75

ದಕ್ಷಿಣ -190

ಪಶ್ಚಿಮ -141

ಯಲಹಂಕ -90

ದಾಸರಹಳ್ಳಿ -8

ಒಟ್ಟು -1230

ವರ್ಷವಾರು ಡೆಂಘೀ ಪ್ರಕರಣಗಳ ವಿವರ:

ವರ್ಷ ಪ್ರಕರಣ

2019 9434

2020 1127

2021 1629

2022 2335

2023 11136 (ಜನವರಿ-ಜೂನ್‌ವರೆಗೆ 732)

2024 1230 (ಜನವರಿ-ಜೂನ್‌ವರೆಗೆ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net