

ಮಂಡ್ಯ: ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸೌಲಭ್ಯಗಳು ಅವರ ಮನೆ ಬಾಗಿಲಲ್ಲೇ ಸಿಗಬೇಕೆನ್ನುವ ನಿಟ್ಟಿನಲ್ಲಿ ಹೃದಯ ವೈಶಾಲ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದಲ್ಲಿ ನಗರದ ಮಿಮ್ಸ್ ಸಭಾಂಗಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೃದಯ ಸಂಬಂಧಿ ರೋಗಗಳನ್ನು ಮೊದಲು ಪತ್ತೆ ಹೆಚ್ಚಿ ಚಿಕಿತ್ಸೆ ನೀಡುವುದರಿಂದ ಹೃದಯಾಘಾತವನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಈ ಯೋಜನೆ ಅನುಕೂಲವಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆ, ಹೃದಯಾಘಾತದ ಪ್ರಕರಣಗಳ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷೆಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿದೆ. ಮೊದಲ ಹಂತದಲ್ಲಿ 35 ಪಿಎಚ್‌ಸಿಗಳಿಗೆ ಇಸಿಜಿ ಯಂತ್ರ ನೀಡಲಾಗಿದೆ. ಇದಕ್ಕಾಗಿ ಜಿಲ್ಲೆಯ ಜನರು ಹಾಗೂ ರಾಜ್ಯಸರ್ಕಾರದ ಪರವಾಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಎಲ್ಲ ಕೇಂದ್ರಕ್ಕೂ ನೀಡುವಂತೆ ಸಂಸ್ಥೆಗೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಗ್ರಾಮೀಣ ಭಾಗದ ಜನರು ಹೃದಯ ಸಂಬಂಧಿತ ಪರೀಕ್ಷೆಗಳನ್ನು ಸೂಕ್ತ ಸಮಯದಲ್ಲಿ ತಪಾಸಣೆ ಮಾಡಿಕೊಳ್ಳುವುದಿಲ್ಲ. ಆದ್ದರಿಂದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಂತೆಯೇ ರ್ಸಾಜನಿಕರು ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಮನವಿ ಮಾಡಿದರು.
ಸಿಎಡಿ ಸಂಸ್ಥೆಯ ಹೃದಯ ತಜ್ಞ ಡಾ.ಪದ್ಮನಾಬ್ ಕಾಮತ್ ಮಾತನಾಡಿ, ಹೃದಯಾಘಾತವಾದಾಗ ಅದನ್ನು ಹೇಗೆ ತಡೆಗಟ್ಟುವುದೆಂದು ಜನರಲ್ಲಿ ಅರಿವು ಮೂಡಿಸಬೇಕಿದೆ. ಎಲ್ಲ ಆರೋಗ್ಯ ಕೇಂದ್ರಗಳಲ್ಲೂ ಇಸಿಜಿ ಲಭ್ಯವಿಲ್ಲ. ಪ್ರತಿ ಆರೋಗ್ಯ ಕೇಂದ್ರಗಳಲ್ಲೂ ಇಸಿಜಿ ಯಂತ್ರ ಅಳವಡಿಸಿದ್ದರೆ ಹೃದಯಘಾತಗಳನ್ನು ತಡೆಗಟ್ಟಬಹುದು ಎಂದರು.
ಶಾಸಕರಾದ ರವಿಕುಮಾರ ಗಣಿಗ, ರಮೇಶ ಬಂಡಿಸಿದ್ದೇಗೌಡ, ದರ್ಶನ ಪುಟ್ಟಣಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಮಿಮ್ಸ್ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ, ಡಾ.ಆಶಾಲತಾ ಇತರರಿದ್ದರು. ಇದೇ ವೇಳೆ ಡಾ.ಪದ್ಮನಾಬ್ ಕಾಮತ್ ಅವರನ್ನು ಸನ್ಮಾನಿಸಲಾಯಿತು.