ಮೈಸೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿ ನಿಲಯದ ದುಸ್ಥಿತಿ ಪರಿಶೀಲಿಸಿದ ಸಚಿವ ಸುಧಾಕರ್

mmc-2
Published on

ಮೈಸೂರು: ಮೈಸೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿಲಯ ದುಸ್ಥಿತಿಯಲ್ಲಿರುವುದು ನನ್ನ ಗಮನಕ್ಕೆ ಬಂದಿದೆ. ಕಟ್ಟಡವನ್ನು ದುರಸ್ತಿ ಮಾಡಬೇಕೇ ಅಥವಾ ಹೊಸದಾಗಿ ನಿರ್ಮಾಣ ಮಾಡಬೇಕೇ ಎಂಬ ಕುರಿತು ಮುರ‌್ನಾಲ್ಕು ದಿನಗಳ ಒಳಗೆ ವರದಿ ನೀಡುವಂತೆ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದಲ್ಲಿ ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿ ಇದ್ದಾರೆ. ಕಟ್ಟಡ ತುಂಬಾ ಹಳೆಯದಾಗಿರುವ ಹಿನ್ನೆಲೆಯಲ್ಲಿ ಕಟ್ಟಡ ಸ್ಥಿತಿಗತಿ ಕುರಿತು ವರದಿ ಪಡೆದು ನಂತರ ನವೀಕರಣ ಅಥವಾ ಮರು ನಿರ್ಮಾಣದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕಟ್ಟಡ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ರಾಜೀವ್ ಗಾಂಧಿ ವೈದ್ಯಕೀಯ ವಿಶ್ವ ವಿದ್ಯಾಲಯ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿರುವ ಅನುದಾನ ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲಾಗುವುದು. ಒಂದುವೇಳೆ ಅನುದಾನದ ಕೊರತೆ ಎದುರಾದರೆ ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡಿ ವಿಶೇಷ ಅನುದಾನ ಪಡೆಯಲಾಗುವುದು ಎಂದರು.

ರಾಜ್ಯದಲ್ಲಿ ಕರೊನಾ ನಿಯಂತ್ರಣಕ್ಕೆ ಬರುತ್ತಿದೆ. ಈ ಹಿಂದೆ ರಾಜ್ಯದಲ್ಲಿ ಕರೊನಾ ಪ್ರಮಾಣ ಶೇ.19 ರಷ್ಟು ಇತ್ತು. ಇದೀಗ ಶೇ.2ಕ್ಕೆ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಬಂದ್ ಮಾಡಲಾಗುತ್ತಿದೆ. ಇದೇ ವೇಳೆ ಪೋಸ್ಟ್ ಕೋವಿಡ್ ಕೇರ್ ಸೆಂಟರ್ ತೆರೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಹೊಸದಾಗಿ ಪ್ರಸಕ್ತ ವರ್ಷದಿಂದಲೇ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net