

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಧನವನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಮಂತ್ರಿ ಕಚೇರಿ (ಪಿಎಂಒ) ಮೂಲಕ ಟ್ವೀಟ್ ಮಾಡಿರುವ ಅವರು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶ್ರೀಘ್ರಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿದ್ದಾರೆ.
ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ಭೀಕರ ಅಪಘಾತ ನಡೆದಿತ್ತು. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್ನಲ್ಲಿದ್ದ ಐವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದು. ಇನ್ನು ಘಟನೆಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್)