

ಹಾಸನ: ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಒತ್ತಾಯಿಸಿ ಮುಸ್ಲಿಮರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮುಸ್ಲಿಂ ಸಮುದಾಯವು ರಾಜಕೀಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಗಣನೀಯವಾಗಿ ಹಿಂದುಳಿದಿದೆ. ಈ ಸಮುದಾಯವು ಸಮಾಜದ ಮುಖ್ಯವಾಹಿನಿಯಲ್ಲಿ ಸಮಾನವಾಗಿ ಭಾಗವಹಿಸಲು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಏಳಿಗೆಯನ್ನು ಸಾಧಿಸಲು ರಾಜಕೀಯ ಅಧಿಕಾರವು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಹುಡಾ ಅಧ್ಯಕ್ಷ ಸ್ಥಾನವನ್ನು ಸೈಯದ್ ತಾಜಿಂ ಅವರಿಗೆ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯವು ರಾಜಕೀಯವಾಗಿ ನಿರಾಸಕ್ತಿಯ ಸ್ಥಿತಿಯಲ್ಲಿದೆ. ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸ್ಥಿರವಾದ ಬೆಂಬಲವನ್ನು ನೀಡಿದ್ದರೂ, ಸಮುದಾಯಕ್ಕೆ ಜಿಲ್ಲೆಯಲ್ಲಿ ಯಾವುದೇ ಉನ್ನತ ರಾಜಕೀಯ ಅಥವಾ ಆಡಳಿತಾತ್ಮಕ ಹುದ್ದೆಗಳನ್ನು ನೀಡಿಲ್ಲ ಎಂದು ದೂರಿದರು.
ಮುಸ್ಲಿಂ ಸಮುದಾಯದ ರಾಜಕೀಯ ಧ್ವನಿ ದುರ್ಬಲವಾಗಿದೆ. ಹೀಗಾಗಿ ಸೈಯದ್ ತಾಜಿಂ ಅವರಿಗೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ಮುಸ್ಲಿಂ ಸಮುದಾಯಕ್ಕೆ ರಾಜಕೀಯ ಶಕ್ತಿಯನ್ನು ಒದಗಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಒತ್ತು ನೀಡುವ ದೃಷ್ಟಿಯನ್ನು ಹೊಂದಿದೆ. ಈ ದೃಷ್ಟಿಯನ್ನು ಮತ್ತಷ್ಟು ಬಲಪಡಿಸಲು ಹುಡಾ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ, ಮುಸ್ಲಿಂ ಸಮುದಾಯಕ್ಕೆ ರಾಜಕೀಯವಾಗಿ ಶಕ್ತಿ ತುಂಬಿ, ಸಮಾಜದ ಮುಖ್ಯವಾಹಿನಿಯಲ್ಲಿ ಸಕ್ರಿಯ ಭಾಗವಹಿಸುವ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದರು.
ಚಾಂದ್ ಪಾಷಾ, ಅಕ್ಮಲ್ ಜಾವಿದ್, ಅನ್ಷದ್ ಪಾಳ್ಯ, ಸೈಯದ್ ಇಲ್ಯಾಸ್, ಸರದಾರ್ ಪಾಶ, ಕಬೀರ್ ಅಹಮದ್, ರಘು ಮತ್ತಿತರರು ಹಾಜರಿದ್ದರು.