ಪ್ರಜಾಪ್ರಭುತ್ವ ಮೌಲ್ಯ ಎತ್ತಿ ಹಿಡಿಯಲು ಮಾನವ ಸರಪಳಿ

Human chain to uphold democratic value
Published on

ಮಡಿಕೇರಿ:

ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಭಾನುವಾರ ನಡೆದ ಮಾನವ ಸರಪಳಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ನಂತರ ನಾಗರಿಕರ ಬದುಕು ಸುಧಾರಿಸುತ್ತಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ. ಸ್ವಾತಂತ್ರ‍್ಯ, ಸಮಾನತೆ, ಭ್ರಾತೃತ್ವ ಮತ್ತು ಸಹೋದರತೆ… ಈ ಅಂಶಗಳು ಪ್ರಜಾಪ್ರಭುತ್ವದ ಆಶಯಗಳಾಗಿವೆ ಎಂದರು.

ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಪ್ರಜಾಪ್ರಭುತ್ವ ಇದ್ದು, ಆ ನಿಟ್ಟಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಯಸ್ಕರಿಗೂ ಮತ ಚಲಾಯಿಸುವ ಹಕ್ಕನ್ನು ನೀಡಿದ್ದಾರೆ ಎಂದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ರಾಷ್ಟ್ರದ ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿದ್ದಾರೆ. ಇವರ ಪ್ರಯತ್ನದಿಂದ ನಾವುಗಳು ಇಂದು ಜನರ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಅವಕಾಶವಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸಂವಿಧಾನ ಪೀಠಿಕೆ ವಾಚಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ರಾಜೇಶ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮತ್ತಿತರರು ಇದ್ದರು.

ಮಾನವ ಸರಪಳಿ ಸಂದರ್ಭದಲ್ಲಿ ಗಣ್ಯರು ಸಾಲಾಗಿ ನಿಂತು ಕೈ ಮೇಲೆ ಮಾಡುವ ಮೂಲಕ ಜೈ ಹಿಂದ್ ಜೈ ಕರ್ನಾಟಕ ಘೋಷ ವಾಕ್ಯ ಮೊಳಗಿಸಿದರು. ಮಾನವ ಸರಪಳಿ ಸಂದರ್ಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಕಲಾವಿದ ಇ.ರಾಜು ತಂಡದವರು ಗೀತಗಾಯನ ನಡೆಸಿಕೊಟ್ಟರು, ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ಆದಿವಾಸಿ ವಿದ್ಯಾರ್ಥಿಗಳು ಗಿರಿಜನ ನೃತ್ಯ ಪ್ರದರ್ಶಿಸಿದರು, ಡೊಳ್ಳು ಕುಣಿತ ಹಾಗೂ ಲಂಬಾಣಿ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿದ್ಯಾರ್ಥಿಗಳಿಬ್ಬರು ಅಂಬೇಡ್ಕರ್ ಅವರ ವೇಷದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಪೊಲೀಸ್ ಇಲಾಖೆಯಿಂದ ಬೈಕ್ ರ‍್ಯಾಲಿ ನಡೆಸಿದ್ದು ಗಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net