

ಮೈಸೂರು: ಮಾನವ ಕಳ್ಳಸಾಗಣೆ ಬಗ್ಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಹೆಗ್ಡೆ ಹೇಳಿದರು.
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಖಿ ಸ್ಟ್ಯಾಂಪ್ ಸೆಂಟರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳಸಾಗಣೆ ಎಂಬುದು ಸಮಾಜದ ಗಂಭೀರ ಸಮಸ್ಯೆಯಾಗಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯ. ಮಕ್ಕಳು, ಬಡವರಿಗೆ ಉದ್ಯೋಗ ನೀಡುವುದಾಗಿ ನಂಬಿಸಿ ಅವರನ್ನು ಬಾಲಕಾರ್ಮಿಕರನ್ನಾಗಿ ಹಾಗೂ ಇತ್ಯಾದಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಜನರಿಗೆ ತಿಳಿಸಲು ಮಾಧ್ಯಮಗಳು ಮೂಲಕ ಪ್ರಸಾರ ಮಾಡಬೇಕು. ಇದರಿಂದ ಅರಿವು ಮೂಡುತ್ತದೆ. ಅಲ್ಲದೇ ಮುಂದೆ ಎಚ್ಚರಿಕೆಯಿಂದ ಇರಲು ಸಹಕಾರಿಯಾಗುತ್ತದೆ ಎಂದರು.
ಮಕ್ಕಳನ್ನು ಹೆಚ್ಚಾಗಿ ಮಾನವ ಕಳ್ಳ ಸಾಗಣೆ ಮಾಡಲಾಗುತ್ತದೆ. ಅವರನ್ನು ರಸ್ತೆ ಬದಿಗಳಲ್ಲಿ ಪೆನ್, ಸ್ಟಿಕ್ಕರ್ಸ್ ಹೀಗೆ ಇತ್ಯಾದಿ ವಸ್ತುಗಳನ್ನು ಮಾರಾಟ ಮಾಡಲು, ಭಿಕ್ಷೆ ಬೇಡಲು ಬಿಡಲಾಗುತ್ತದೆ. ಸಾರ್ವಜನಿಕರು ಅದನ್ನು ಗುರುತಿಸದೆ ಕೊಂಡುಕೊಳ್ಳುವುದರ ಮೂಲಕ ಪರೋಕ್ಷವಾಗಿ ಕಳ್ಳ ಸಾಗಾಣಿಕೆಗೆ ಸಹಾಯ ಮಾಡಿದಂತಾಗುತ್ತದೆ. ಹೀಗಾಗಿ ಈ ರೀತಿಯಾಗಿ ಯಾವುದೇ ವ್ಯಕ್ತಿ ಅಥವಾ ಮಕ್ಕಳು ಕಂಡು ಬಂದರೆ ಅವರ ಹಿನ್ನೆಲೆಯನ್ನು ತಿಳಿದು, ಅಂತಹ ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.
ಮಾನವ ಕಳ್ಳ ಸಾಗಣೆ ಎಂಬ ದೊಡ್ಡ ಪಿಡುಗನ್ನು ನಾಶಮಾಡಲು ಕೇವಲ ಒಬ್ಬರಿಂದ ಸಾಧ್ಯವಿಲ್ಲ. ಹೀಗಾಗಿ ಪ್ರತಿಯೊಂದು ಇಲಾಖೆ, ಪ್ರತಿಯೊಂದು ಸಂಸ್ಥೆ ಹಾಗೂ ಸಾರ್ವಜನಿಕರ ಒಗ್ಗಟ್ಟಿನಿಂದ ಸಮಾಜದಲ್ಲಿ ಈ ಸಮಸ್ಯೆಯನ್ನು ನಿರ್ಮೂಲನೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಮಾತನಾಡಿ, ಅಸಂಘಟಿತ ವಲಯಗಳು ಸಂಘಟಿತವಾಗಿ ಮಾಡುವ ಶೋಷಣೆಯೇ ಮಾನವ ಕಳ್ಳ ಸಾಗಾಣಿಕೆ. ಇದರ ಬಗ್ಗೆ ಪ್ರತಿಯೊಂದು ಇಲಾಖೆಯೂ ತಮ್ಮ ವ್ಯಾಪ್ತಿಗೆ ಬರುವ ಸಾರ್ವಜನಿಕರಿಗೆ ವಿಶೇಷ ಕಾರ್ಯಕ್ರಮ ಕೈಗೊಂಡು ಜಾಗೃತಿ ಮೂಡಿಸಬೇಕು ಎಂದರು.
ಸರ್ಕಾರೇತರ ಸಂಸ್ಥೆಗಳು ಮಾನವ ಕಳ್ಳ ಸಾಗಣೆ ತಡೆಯಲು ಕೈಜೋಡಿಸಬೇಕು. ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಗ್ರಾಮ ಸಭೆ ನಡೆಸಿ ಜನರಿಗೆ ಕಳ್ಳ ಸಾಗಾಣಿಕೆ ಬಗ್ಗೆ ವಿಷಯ ಮುಟ್ಟಿಸಬೇಕು. ಇದರಲ್ಲಿ ಪ್ರತಿಯೊಂದು ಇಲಾಖೆಯ ಹಾಗೂ ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾತನಾಡಿ, ಪ್ರಸ್ತುತ ಮಾನವ ಕಳ್ಳ ಸಾಗಣೆ ದೊಡ್ಡ ಸಮಸ್ಯೆಯಾಗಿದ್ದು, ಕಾಣೆಯಾದ ಯಾವುದೇ ಪ್ರಕರಣವನ್ನು ನಿರ್ಲಕ್ಷೃ ಮಾಡಬಾರದು. ತಕ್ಷಣ ಸರಿಯಾದ ಕ್ರಮ ಕೈಗೊಳ್ಳಬೇಕು.
ಮಾನವ ಕಳ್ಳ ಸಾಗಣೆ ಎಂಬುದು ದೊಡ್ಡ ಅಪರಾಧ. ದೇಶದ ಭದ್ರತೆಗೆ ಮಾರಕವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಕೈಜೋಡಿಸಿ ಮಾನವ ಕಳ್ಳ ಸಾಗಾಣೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಧಿಕಾರಿಗಳಿಗೆ ಮಾನವ ಕಳ್ಳ ಸಾಗಣೆ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ.ದಿನೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯೋಗೇಶ್, ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.