ಮಾನವಿತೆಯೇ ನಿಜವಾದ ಧರ್ಮ

29 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಕಾಣಿಕೆಯಾಗಿ ಕೊಟ್ಟ ಕುವೆಂಪು, ತಮ್ಮ ಮೇರು ಕೃತಿಗಳಿಂದಲೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ವಿಶ್ವಮಾನವ ದಿನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಕೃತಿ ಮೂಲಕ ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್ ರಸಋಷಿ. ಅವರು ವಿಶ್ವಕ್ಕೆ ಕೊಡುಗೆಯಾಗಿ ಕೊಟ್ಟ ವಿಶ್ವಮಾನವ ಸಂದೇಶವನ್ನು ಅಕ್ಷರಶಃ ಪಾಲಿಸುವ ಪ್ರಯತ್ನ ಹಾಗೂ ಉದಾತ್ತ ಚಿಂತನೆ, ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಜೀವನದ ದಾರಿದೀಪವಾಗಿ ಮಾಡಿಕೊಳ್ಳಬೇಕು. ಕುವೆಂಪು ಸಾಹಿತ್ಯ ಅನುಸರಿಸಿ ಪ್ರತಿ ಮನೆ ಮನಗಳಿಗೆ ಸಾಹಿತ್ಯದ ವಿಚಾರಧಾರೆ ತಲುಪಿಸಬೇಕು. ಸರಳ ವಿವಾಹದ ಮಂತ್ರ ಮಾಂಗಲ್ಯ ಎಂಬ ಮದುವೆಯ ವಿಶಿಷ್ಟ ಸಂದೇಶವನ್ನು ಸಾರಿದ್ದಾರೆ ಎಂದರು.
ಹಿರಿಯ ಸಾಹಿತಿ ಪ್ರೊ. ಶಾಂತಿನಾಥ ದಿಬ್ಬದ ಉಪನ್ಯಾಸ ನೀಡಿ, ವಿಶ್ವಮಾನವ ಪರಿಕಲ್ಪನೆ ಹುಟ್ಟು ಹಾಕಿದವರು ಕುವೆಂಪು. ಮಾನವರೆಲ್ಲರೂ ಒಂದೇ ಎಂದು ಜಾತಿ ವ್ಯವಸ್ಥೆ ನಿರ್ಮೂಲನೆಗೆ ಕಥೆ, ಕಾದಂಬರಿ, ವೈಚಾರಿಕತೆಯ ಕಾವ್ಯಗಳ ಮೂಲಕ ಹೋರಾಡಿದರು. ಕುವೆಂಪು ಸಾಹಿತ್ಯವನ್ನು ವಿದ್ಯಾರ್ಥಿಗಳು ಓದಬೇಕು. ಇದರಿಂದ ಉತ್ತಮ ವ್ಯಕ್ತಿತ್ವ ನಿರ್ಮಿಸಿಕೊಳ್ಳಬಹುದು ಎಂದರು.
ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ವಿದ್ಯಾರ್ಥಿಗಳು, ಇತರರು ಇದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಪ್ರಬಂಧ, ಸ್ಪರ್ಧೆಗಳ ವಿಜೇತರಿಗೆ ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಮೇಘಾ ಪಾಟೀಲ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net