

ಮಂಡ್ಯ: ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಅಳವಡಿಸಿಕೊಂಡಿರುವ ಸುಭಾಷ್ ಪಾಳೇಕರ್ ಕೃಷಿ ಪದ್ಧತಿಯನ್ನು ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ರೈತರು ಅನುಸರಿಸುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಲಹೆ ನೀಡಿದರು.
ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಿರ್ಮಲ ಭೂಮಾತಾ ಸುಭಾಷ್ ಪಾಳೇಕರ್ ಕೃಷಿ ಆಂದೋಲನ ಜಿಲ್ಲಾ ಶಾಖೆಯಿಂದ ಶನಿವಾರ ಪದ್ಮಶ್ರೀ ಡಾ.ಸುಭಾಷ್ ಪಾಳೇಕರ್ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ 75 ಜನ ರೈತರಿಗೆ ತೆಂಗಿನ ಸಸಿ ವಿತರಣೆ ಹಾಗೂ ಸುಭಾಷ್ ಪಾಳೇಕರ್ ಕೃಷಿ ಪದ್ಧತಿಯಲ್ಲಿ ಭತ್ತ ಬೆಳೆಯುವ ವಿಧಾನ ಹ್ಯೂಮಸ್ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಸುಭಾಷ್ ಪಾಳೇಕರ್ ಅವರು ರೈತ ಸಮುದಾಯಕ್ಕೆ ತನ್ನದೇ ಆದ ನೈಸರ್ಗಿಕ ಕೃಷಿ ಪದ್ಧತಿಯನ್ನು ಶಾಶ್ವತವಾಗಿ ಇತಿಹಾಸದಲ್ಲಿ ಬಿಟ್ಟು ಹೋಗಿದ್ದಾರೆ. ಇದನ್ನು ರೈತರು ಅವಲಂಬನೆ ಮಾಡುತ್ತಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಮಾತನಾಡಿ, ಜಿಲ್ಲೆಯ ರೈತರು ಸಾವಯವ ಕೃಷಿ ಪದ್ಧತಿಯನ್ನು ಹೆಚ್ಚಿನ ರೀತಿ ಅಳವಡಿಸಿಕೊಳ್ಳಬೇಕು. ಜಿಲ್ಲೆಯವರೇ ಕೃಷಿ ಮಂತ್ರಿ ಆಗಿರುವುದರಿಂದ ಜಿಲ್ಲೆಗೆ ಬೇಕಾದಷ್ಟು ಬಿತ್ತನೆ ಬೀಜ ದಾಸ್ತಾನು ಇದೆ. ರೈತರಿಗೆ ತೊಂದರೆಯಾಗದ ರೀತಿ ಕ್ರಮ ವಹಿಸಲಾಗಿದೆ ಎಂದರು.
ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಜಿಪಂ ಮಾಜಿ ಸದಸ್ಯ ಎನ್.ಶಿವಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಜಿಲ್ಲಾ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ, ಸಂಪೂರ್ಣ ಸಾವಯವ ಕೃಷಿಕರ ಸಂಘದ ಅಧ್ಯಕ್ಷ ಎಂ.ಎನ್.ಮಹೇಶ್‌ಕುಮಾರ್, ಸುಭಾಷ್ ಪಾಳೇಕರ್ ಕೃಷಿಕರಾದ ಕೆ.ಜಿ.ಅನಂತ್‌ರಾವ್ ಕೆರಗೋಡು, ರವಿಕುಮಾರ್ ಮಾರಗೌಡನಹಳ್ಳಿ ಇತರರಿದ್ದರು. ಇದೇ ಸಂದರ್ಭದಲ್ಲಿ ಸುಭಾಷ್ ಪಾಳೇಕರ್ ಕೃಷಿಕ ಮದ್ದೂರು ತಾಲೂಕಿನ ಅಂಬರಹಳ್ಳಿ ರಾಜಣ್ಣ ಅವರನ್ನು ಸನ್ಮಾನಿಸಲಾಯಿತು.