

ಹನೂರು: ಕೇಂದ್ರ ಹಾಗೂ ರಾಜ್ಯದ ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಭದ್ರತೆ ಉಂಟು ಮಾಡಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಆರ್.ನರೇಂದ್ರ ಆರೋಪಿಸಿದರು.
ಮೈಸೂರಿನಲ್ಲಿ ಆ.9ರಂದು ಕಾಂಗ್ರೆಸ್‌ನಿಂದ ನಡೆಯಲು ನಿರ್ಧರಿಸಿರುವ ಜನಾಂದೋಲನ ಕಾರ್ಯಕ್ರಮದ ಅಗತ್ಯ ಸಿದ್ಧತೆ ಕುರಿತು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಉತ್ತಮ ಅಡಳಿತ ನೀಡುತ್ತಿದೆ. ಈ ಯೋಜನೆಗಳನ್ನು ಇತರ ರಾಜ್ಯಗಳು ಅನುಸರಿಸುತ್ತಿವೆ. ಮುಡಾದಲ್ಲಿ ಕಾನೂನಿನ ಚೌಕಟ್ಟಿನಲ್ಲಿಯೇ ನಿವೇಶನವನ್ನು ಸಿಎಂ ಪತ್ನಿಗೆ ವಿತರಿಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕರಾಗಿದ್ದ ರಾಮದಾಸ್, ನಾಗೇಂದ್ರ, ಜೆಡಿಎಸ್‌ನ ಸಾ.ರಾ.ಮಹೇಶ್ ಹಾಗೂ ಜಿ.ಟಿ.ದೇವೇಗೌಡ ಮೂಡಾದ ಸದಸ್ಯರಾಗಿದ್ದರು. ಆದರೆ ಇವರಲ್ಲಿ ಯಾರೊಬ್ಬರೂ ಈ ಬಗ್ಗೆ ಮಾತನಡುತ್ತಿಲ್ಲ. ಆದರೆ ಮುಡಾ ಹಗರಣ ಎಂದು ನೆಪವೊಡ್ಡಿ ಜೆಡಿಎಸ್ ಹಾಗೂ ಬಿಜೆಪಿಗರು ಜತೆಗೂಡಿ ಪಾದಯಾತ್ರೆ ಹಮ್ಮಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದಕ್ಕೆ ತಕ್ಕಪಾಠ ಕಲಿಸಬೇಕಿದೆ. ಆದ್ದರಿಂದ ನಮ್ಮ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಲು ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹನೂರು ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಆದರೆ ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರ ಯಾವ ರೀತಿ ಆಡಳಿತ ನೀಡಿದೆ ಎಂಬುದು ಜನರಿಗೆ ತಿಳಿದಿದೆ. ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನೀಡುತ್ತಿರುವುದನ್ನು ಸಹಿಸದೆ ಇಕ್ಕಿಟ್ಟಿಗೆ ಸಿಲುಕಿಸಬೇಕು ಎಂಬ ಉದ್ದೇಶದಿಂದ ಮುಡಾ ಹಗರಣ ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನೂರಿನ ಮುಕುಂದವರ್ಮ, ರಾಮಾಪುರದ ಈಶ್ವರ್, ಮಹಿಳಾ ಘಟಕದ ಅಧ್ಯಕ್ಷೆ ಅತೀಯಾ ಬಾನು, ಚಾಮುಲ್ ನಿರ್ದೇಶಕ ಶಾಹುಲ್ ಆಹಮದ್, ಜಿಪಂ ಮಾಜಿ ಸದಸ್ಯ ಬಸವರಾಜು ಇನ್ನಿತರರಿದ್ದರು.