ಗರ್ಭಿಣಿ ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

Published on

ಮೈಸೂರು: ಹಣಕ್ಕಾಗಿ ಗರ್ಭಿಣಿ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ವ್ಯಕ್ತಿಗೆ ನಗರದ ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನಂಜನಗೂಡಿನ ಚಾಮಲಾಪುರ ಹುಂಡಿಯ ಮಂಜು ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರೀತಿಸಿ ಮದುವೆಯಾಗಿದ್ದ ಶೋಭಾಳಿಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಹಣದ ವಿಚಾರವಾಗಿ ಗಲಾಟೆ ತೆಗೆದ ಮಂಜು, 8 ತಿಂಗಳ ಗರ್ಭಿಣಿಯಾಗಿದ್ದ ಶೋಭಾ ಅವರನ್ನು 2023ರ ಸೆಪ್ಟೆಂಬರ್14 ರಂದು ಮನೆಯಲ್ಲಿ ಬ್ಲೇಡ್‌ನಿಂದ ಆಕೆಯ ಕತ್ತು ಕೊಯ್ದಿದ್ದ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಶೋಭಾ, ನಂಜನಗೂಡು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಗರ್ಭದಲ್ಲಿದ್ದ ಗಂಡು ಮಗು ಸಹ ಮೃತಪಟ್ಟಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಪಟ್ಟಣ ಠಾಣೆ ಪೊಲೀಸರು, ಮಂಜುವನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳವರ್ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಬಿ.ಈ.ಯೋಗೇಶ್ವರ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net