

ರಾಯಚೂರು: ನಾನು ಅಯೋಧ್ಯೆಗೆ ಹೋಗಲ್ಲ, ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು ಅದನ್ನು ವಿರೋಧಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಡ್ಜ್‌ನ ಕನಕ ಗುರುಪೀಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ರಾಮಮಂದಿರ ನಿರ್ಮಾಣಕ್ಕೆ ನಮ್ಮದೇನು ವಿರೋಧವಿಲ್ಲ. ಆದರೆ ರಾಜಕಾರಣ್ ಮಾಡಬಾರದು. ಮಂದಿರ ಉದ್ಘಾಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ಲಾಭ ಪಡೆಯಲು ಪ್ರಯತ್ಬಿಸುತ್ತಿದೆ.
ನಾವು ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇರಿಸಿಕೊಂಡವರು. ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ಎಲ್ಲ ಧರ್ಮ, ಎ ಜಾತಿಯವರ ಪರವಾಗಿ ಇರುವವರು. ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯುವವರು ನಾವಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು.
ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಾನಾಗಲಿ, ಯತೀಂದ್ರ ಆಗಲಿ ಎಲ್ಲಿಯೂ ಮಾತನಾಡಿಲ್ಲ. ಪ್ರತಾಪ್ ಸಿಂಹಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ. ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಸುಮ್ಮನೆ ಊಹಾಪೋಹಗಳು ಅಷ್ಟೇ ಎಂದರು.
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರು, ಸಂಸದರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೆಟ್ ನೀಡಲಾಗುವುದು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮಿ ಯೋಜನೆಯಡಿ ಕೊಡುವ 2000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನೂರು ರೂ.ಗಳನ್ನಾದರೂ ಕೊಟ್ಟಿದ್ದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ, ಎನ್.ಎಸ್.ಬೋಸರಾಜು, ಶಾಸಕರಾದ ಹಂಪಯ್ಯ ನಾಯಕ, ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ ಇದ್ದರು.