

ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡದಂತೆ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಬುಧವಾರ ಸೈನಿಕ ಶಾಲೆ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಹಾರಾಷ್ಟ್ರದ ವಿಮೆ ಯೋಜನೆ ಕರ್ನಾಟಕದೊಳಗೆ ಬರದಂತೆ ಮುಖ್ಯ ಕಾರ್ಯದರ್ಶಿ ಅವರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ. 65 ಸೀಟುಗಳನ್ನು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.
ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ಸುಮಾರು 110 ಎಕರೆ ಜಮೀನಿನಲ್ಲಿ ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡಿದೆ ಎಂದರು.