ಶ್ವೇತಪತ್ರ ಬಿಡುಗಡೆಗೆ ಸಲಹೆ ನೀಡುತ್ತೇನೆ

Rayareddi pm
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ. ಅಗತ್ಯವಿದ್ದಲ್ಲಿ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಆರ್ಥಿಕ ಸ್ಥಿತಿಯ ಕುರಿತು ಶ್ವೇತಪತ್ರ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಸಲಹೆ ನೀಡುತ್ತೇನೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಎಂಬ ವಿರೋಧ ಪಕ್ಷಗಳ ಟೀಕೆಗೆ ಅರ್ಥವಿಲ್ಲ. ಪ್ರಸಕ್ತ ಸಾಲಿನಲ್ಲಿ 4.09 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದೇವೆ. ಅದರಲ್ಲೂ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಲೆಂದೇ 83 ಸಾವಿರ ಕೋಟಿ ರೂ. ಬಂಡವಾಳ ವೆಚ್ಚವಿದೆ. ಬಿಜೆಪಿಯವರು ವಿನಾಕರಣ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪ ಮಾಡುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಹಿಂದಿನ ಬಿಜೆಪಿ ಸರ್ಕಾರ ತನ್ನ ಅವಧಿಯ ಕೊನೆಯ ವರ್ಷದಲ್ಲಿ 2.47 ಲಕ್ಷ ಕೋಟಿ ರೂ. ಕಾಮಗಾರಿಗಳಿಗೆ ಅನುಮೋದನೆ ಕೊಟ್ಟು ಹೋಗಿದ್ದರು. ಸುಮಾರು 42 ಸಾವಿರ ಕೋಟಿ ರೂ. ಬಿಲ್ ಪಾವತಿ ಬಾಕಿ ಉಳಿಸಿದ್ದರು. ಕಳೆದ 2 ವರ್ಷಗಳಲ್ಲಿ ಇವನ್ನೆಲ್ಲ ಸರಿದೂಗಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತಂದಿದ್ದೇವೆ. 2025-26ನೇ ಸಾಲಿನ ಬಜೆಟ್​ನಲ್ಲಿ ತೆರಿಗೆ ರಾಜಸ್ವ ಗುರಿ 2.03 ಲಕ್ಷ ಕೋಟಿ ರೂ. ಇದೆ. ಜೂನ್ ಅಂತ್ಯಕ್ಕೆ 43,935 ಕೋಟಿ ರೂ. ಸಂಗ್ರಹಿಸಿ ಶೇ. 21.6 ರಷ್ಟು ಗುರಿ ಸಾಧಿಸಿದ್ದೇವೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net