

ಶಿವಮೊಗ್ಗ: ಉಗ್ರರ ದಾಳಿ ಬಳಿಕ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳನ್ನು ಅವರ ದೇಶಕ್ಕೆ ಕಳುಹಿಸುವ ರಾಜತಾಂತ್ರಿಕ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದೇ ರೀತಿ ಜಿಲ್ಲಾಡಳಿತವು ಜಿಲ್ಲೆಯಲ್ಲಿರುವ ಪಾಕ್ ಪ್ರಜೆಗಳನ್ನು ಗುರುತಿಸಿ ಕಳುಹಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.
ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಕೇಂದ್ರದ ಸೂಚನೆಗಳು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿವೆ. ಕರ್ನಾಟಕವೂ ಸೇರಿ ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳು ಅದನ್ನು ಪಾಲನೆ ಮಾಡುತ್ತಿಲ್ಲ. ನಮ್ಮ ಜಿಲ್ಲೆಯಲ್ಲಿ ಇದು ಸಮರ್ಪಕವಾಗಿ ಜಾರಿಯಾಗಬೇಕೆಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಪಾಕ್ ಪ್ರಜೆಗಳನ್ನು ಅವರ ದೇಶಕ್ಕೆ ಕಳಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರನ್ನು ಭೇಟಿಯಾಗಿ ಮೇ 7ರಂದು ಬಿಜೆಪಿಯಿಂದ ಮನವಿ ನೀಡಲಾಗುವುದು. ಈ ಸಂಬಂಧ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.
ಕಾಶ್ಮೀರದಲ್ಲಿ ಉಗ್ರರ ದಾಳಿ ಪಾಕಿಸ್ತಾನ ಬೆಂಬಲಿತ ಕೃತ್ಯ. ಇದಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ರಾಜತಾಂತ್ರಿಕ ಕ್ರಮ ಕೈಗೊಂಡಿದ್ದಾರೆ. ಪಾಕಿಸ್ತಾನ ಪ್ರಜೆಗಳು ಭಾರತ ಬಿಟ್ಟು ಹೋಗುವಂತೆ ಗಡುವು ನೀಡಿದ್ದರೂ ರಾಜ್ಯದಲ್ಲಿ ಇನ್ನೂ ಓಡಾಡಿಕೊಂಡಿರುವ ಮಾಹಿತಿಯಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಎಂ.ಬಿ.ಹರಿಕೃಷ್ಣ, ಸಿ.ಎಚ್.ಮಾಲತೇಶ್, ಪ್ರಮುಖರಾದ ಚಂದ್ರಶೇಖರ್, ನಾಗರಾಜ್ ಇತರರಿದ್ದರು.