

ಚಿಕ್ಕಮಗಳೂರು: ಬೇಲೂರು, ಹಾಸನ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಸರ್ವೇ ನಡೆದಿದ್ದು ಸರ್ಕಾರಿ ಜಾಗ ಗುರುತಿಸುವಂತೆ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಆನಂದಸಿಂಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಪಂ ಸಭಾಂಗಣದಲ್ಲಿ ಶುಕ್ರವಾರ ಚಿಕ್ಕಮಗಳೂರು-ಬೇಲೂರು-ಹಾಸನ ರೈಲು ಮಾರ್ಗ ನಿರ್ಮಾಣ ಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರ ಅಸಮಾಧಾನ:
ನಗರದಿಂದ ಹಾಸನ ರೈಲು ಮಾರ್ಗ ನಿರ್ಮಾಣಕ್ಕೆ 1200 ಕೋಟಿ ರೂ. ಅಂದಾಜು ವೆಚ್ಚದ ಕ್ರಿಯಾಯೋಜನೆ ಸಲ್ಲಿಸಲಾಗಿದ್ದು, ಭೂಸ್ವಾಧೀನ ಸೇರಿದಂತೆ ಮೊದಲ ಹಂತದಲ್ಲಿ 465 ಕೋಟಿ ರೂ. ಮಂಜೂರಾಗಿದೆ. ಇದಾಗಿ ಎರಡು ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗದ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಿಂದ ಬೇಲೂರಿಗೆ 22 ಕಿ.ಮೀ. ಮತ್ತು ಬೇಲೂರಿನಿಂದ ಹಾಸನಕ್ಕೆ 38 ಕಿ.ಮೀ. ಸೇರಿದಂತೆ ಒಟ್ಟು 60 ಕಿ.ಮೀ. ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆ. ಇದರಲ್ಲಿ ಸರ್ಕಾರಿ ಜಾಗ ಗುರುತಿಸುವಂತೆ ತಿಳಿಸಿದ ಸಚಿವರು, ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಿರುವ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಮಾತನಾಡಿ, 150 ಎಕರೆ ಖಾಸಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
ಉಭಯ ಡಿಸಿಗಳು ಗಮನ ಹರಿಸಲಿ:
ಶಾಸಕ ಸಿ.ಟಿ.ರವಿ ಮಾತನಾಡಿ, ರೈಲು ಮಾರ್ಗದಲ್ಲಿ ಗ್ರಾಮಗಳು ಒಳಪಟ್ಟಿದ್ದರೆ ಬೇರೆಡೆ ಜಾಗ ಗುರುತಿಸಿ ಮಾರ್ಗ ಬದಲಾಯಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾಧಿಕಾರಿಗಳು ಸಭೆ ಸೇರಿ ರೈಲ್ವೆ ಮಾರ್ಗ ನಿರ್ಮಾಣದ ಬಗ್ಗೆ ಚರ್ಚಿಸಿ ಕಾಮಗಾರಿ ಪ್ರಾರಂಭಕ್ಕೆ ಗಮನ ಹರಿಸಬೇಕು ಎಂದು ತಿಳಿಸಿದರು. ಶಾಸಕ ಟಿ.ಡಿ.ರಾಜೇಗೌಡ, ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಉಪಾಧ್ಯಕ್ಷ ಬಿ.ಜೆ.ಸೋಮಶೇಖರಪ್ಪ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಪಂ ಸಿಇಒ ಎಸ್.ಪೂವಿತಾ, ಎಸ್ಪಿ ಎಂ.ಎಚ್.ಅಕ್ಷಯ್, ಎಡಿಸಿ ಬಿ.ಆರ್.ರೂಪಾ ಇತರರಿದ್ದರು.