ಬಾಲ ಕಾರ್ಮಿಕರು ಕಂಡುಬಂದಲ್ಲಿ ಹತ್ತಿರದ ಶಾಲೆಗೆ ಸೇರಿಸಿ: ಡಿ.ಟಿ.ಪುಟ್ಟರಂಗಸ್ವಾಮಿ

MDK10
Published on

ಮಡಿಕೇರಿ: ಜಿಲ್ಲೆಯಲ್ಲಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾತಿಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-೧೦೯೮ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಕ್ಕಳು ಕುಟುಂಬದ ಬಡತನದಿಂದ ಶಾಲೆಗೆ ಹೋಗದೇ ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಾರೆ. ಇದನ್ನು ತಪ್ಪಿಸುವ ಉದ್ದೇಶಕ್ಕಾಗಿ ಸರ್ಕಾರ ೧೪ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದೆ. ಜೊತೆಗೆ ವಿದ್ಯಾರ್ಥಿ ನಿಲಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.


ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡುಬಂದಲ್ಲಿ ಮನವರಿಕೆ ಮಾಡಿ ಶಾಲೆಗೆ ಹೋಗುವಂತೆ ತಿಳಿಸಬೇಕು. ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಈ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.


ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸಬೇಕು. ಶಿಕ್ಷಣದ ಮಹತ್ವದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ತೊಡಗಿಸಿಕೊಳ್ಳಬಾರದು. ಮಕ್ಕಳಿಗೆ ಶಿಕ್ಷಣ ನೀಡಿದ್ದಲ್ಲಿ ರಾಷ್ಟ್ರದ ಪ್ರಗತಿ ಸಾಧ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.


ಹಿರಿಯ ವಕೀಲ ಕೆ.ಆರ್.ವಿದ್ಯಾಧರ ಗೌಡ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮಕ್ಕಳು ಶಿಕ್ಷಣವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿಕೊಂಡಲ್ಲಿ ೨೦ ರಿಂದ ೫೦ ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ಜತೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಎಲ್ಲರೂ ಆರ್ಥಿಕವಾಗಿ ಸಮಾನರಾಗಿದ್ದರೆ ಬಾಲ ಕಾರ್ಮಿಕ ಪದ್ಧತಿ ಕಂಡು ಬರುವುದಿಲ್ಲ. ಆದ್ದರಿಂದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಪಣ ತೊಡಬೇಕು ಎಂದರು.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ ಮಾತನಾಡಿ, ಮಕ್ಕಳ ಬಾಲ್ಯಾವಸ್ಥೆ ಸಂತಸದಿಂದ ಕೂಡಿರಬೇಕು. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿಷ್ಠಿತ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.


ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಚೈಲ್ಡ್‌ಲೈನ್-೧೦೯೮ ನಿರ್ದೇಶಕ ವಿ.ಎಸ್.ರಾಯ್ ಡೇವಿಡ್‌ರವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕೊನೆಯಾಗಬೇಕು. ಮಕ್ಕಳ ರಕ್ಷಣೆ, ಪೋಷಣೆಗೆ ಒತ್ತು ನೀಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು. ಆದಿವಾಸಿ ಮಕ್ಕಳು ಸೇರಿದಂತೆ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದರು.


ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಎಸ್.ಎಲ್.ಹರ್ಷವರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ, ಉಪ ಪ್ರಾಂಶುಪಾಲ ನಳಿನಿ, ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾರ್ ಅಹ್ಮದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net