

ಮೈಸೂರು: ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಪಡೆಯುತ್ತಿದೆ ಎಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದ್ದು, ಈ ಕುರಿತು ಅವರಲ್ಲಿ ದಾಖಲೆಗಳು ಇದ್ದರೆ ತನಿಖಾ ಸಂಸ್ಥೆಗೆ ಒಪ್ಪಿಸಲಿ ಎಂದು ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಸವಾಲು ಹಾಕಿದರು.
ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಹೊರಿಸುವುದನ್ನು ಬಿಡಬೇಕು. ಮೊದಲು ಅವರು ತಮ್ಮ ಮನೆಯ ಹುಳುಕನ್ನು ಸರಿಪಡಿಸಿಕೊ ಳ್ಳಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್ ನಾಯಕರು ಒಂದೇ ಸುಳ್ಳನ್ನು ನೂರು ಬಾರಿಹೇಳಿ ಅದನ್ನೇ ಸತ್ಯ ಮಾಡಲು ಹೊರಟಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಕ್ರಮಗಳನ್ನು ಮರೆ ಮಾಚುವ ಸಲುವಾಗಿ ಲೋಕಾಯುಕ್ತವನ್ನು ಬಲಹೀನಗೊಳಿಸಿ ಎಸಿಬಿ ರಚನೆ ಮಾಡಿದರು. ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸದೆ ಇದ್ದಿದ್ದರೆ ಕಾಂಗ್ರೆಸ್ ನಾಯಕರ ಹಲವಾರು ಹಗರಣಗಳು ಹೊರಗೆ ಬರುತಿತ್ತು ಎಂದರು.
ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಪಕ್ಷದ ಮುಖಂಡರು ನಿರ್ದೇಶನ ನೀಡಿದ್ದು, ಆ ಪ್ರಕಾರ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಕ್ಷದ ಹಿರಿಯರು ನನಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡುವರೋ ಅಲ್ಲಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ವಕ್ತಾರ ಮಹೇಶ್ ರಾಜೇ ಅರಸ್ ಹಾಗೂ ಇತರರು ಇದ್ದರು.