ದೂರು ಬಂದರೆ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ

mysore
Published on

ಮೈಸೂರು: ದೂರು ಬಂದರೆ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಮರೀಗೌಡ ಎಚ್ಚರಿಸಿದರು.


ಮುಡಾ ಕಚೇರಿಯ ಎಲ್ಲ ಶಾಖೆಗಳಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು, ನೌಕರರು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಸರಿಯಾದ ಸಮಯಕ್ಕೆ ಬರಬೇಕು ಎಂದು ತಾಕೀತು ಮಾಡಿದರು.


ಮಧ್ಯವರ್ತಿಗಳನ್ನು ದೂರವಿಟ್ಟು ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸ ಮಾಡಿ ಕೊಡಬೇಕು. ಆಗದಿದ್ದರೆ, ಹಿಂಬರಹ ಕೊಡಬೇಕು. ಆಯಾ ಶಾಖೆಯ ಕಚೇರಿಗೆ ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ನೋಂದಣಿ ಮಾಡಿಕೊಳ್ಳಬೇಕು, ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು. ಅವರನ್ನು ಅಲೆಸಬಾರದು ಎಂದು ಎಚ್ಚರಿಸಿದರು.


ಈಗಾಗಲೇ ಅಧಿಕಾರಿಗಳ ಸಭೆ ಮಾಡಿ ತಿಳಿಸಿದ್ದು, ನಿಮಗೂ ವಿಷಯ ತಿಳಿದಿರಲಿ ಎಂದು ಹೇಳುತ್ತಿದ್ದೇನೆ. ಮುಡಾದಲ್ಲಿ ಎಲ್ಲೆಲ್ಲಿ ಏನು ನಡೆಯುತ್ತಿದೆ ಎಂಬುದು ನಮಗೆ ಗೊತ್ತಿದೆ. ಪ್ರತಿ ಶಾಖೆಯವರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net