

ಬಾಳೆಹೊನ್ನೂರು: ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಇದ್ದರೆ ಅಪರಾಧಗಳ ಸಂಖ್ಯೆ ಇಳಿಮುಖವಾಗಲಿದೆ ಎಂದು ಪಿಎಸ್‌ಐ ವಿ.ಟಿ.ದಿಲೀಪ್ ಕುಮಾರ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ತೆರೆದಮನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಕುರಿತು ಮಾಹಿತಿ ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದಿರುತ್ತಾರೆ. ಆಗ ಯಾವುದೇ ಅನ್ಯ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದರು.
ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ವೇಳೆ ಕಾನೂನಿಗೆ ಗೌರವಕೊಡಬೇಕು. ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಎಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಹಲವು ವಿದ್ಯಾರ್ಥಿಗಳು ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುತ್ತಿದ್ದು ಈ ಬಗ್ಗೆ ನಿಗಾ ವಹಿಸಬೇಕು ಎಂದರು.
ಪೊಲೀಸ್ ಇಲಾಖೆಯಿಂದ ವಿದ್ಯಾರ್ಥಿಗಳಲ್ಲಿ ಠಾಣೆ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಹಾಗೂಪೊಲೀಸರು ಉಪಯೋಗಿಸುವ ವಿವಿಧ ಆಯುಧಗಳ ಕುರಿತು ಮಾಹಿತಿಗಾಗಿ ತೆರೆದ ಮನೆ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
ಬಿಜಿಎಸ್ ಪ್ರಾಚಾರ್ಯ ಡಾ.ವೈ.ಎ.ಸುರೇಶ್, ಉಪನ್ಯಾಸ ರಿಚರ್ಡ್ ಮೆನೇಜಸ್ ಮತ್ತಿತರರು ಇದ್ದರು.