ಧರ್ಮ ಮಾರ್ಗದಲ್ಲಿ ಸಾಗಿದರೆ ಸಿಗಲಿದೆ ಶಾಂತಿ ನೆಮ್ಮದಿ

Published on

ಕೆ.ಆರ್.ಪೇಟೆ: ದೇವರು, ಧರ್ಮ ಮಾರ್ಗದಲ್ಲಿ ಸಾಗಿದರೆ ಕೈಹಿಡಿದ ಕೆಲಸದಲ್ಲಿ ಯಶಸ್ಸು ಮತ್ತು ಕೀರ್ತಿ ಗಳಿಸುವ ಜತೆಗೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಸುಲಭವಾಗಿ ಪಡೆಯಬಹುದು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿಪ್ರಾಯಪಟ್ಟರು.


ತಾಲೂಕಿನ ಕಸಬಾ ಹೋಬಳಿಯ ಹರಿಹರಪುರ ಗ್ರಾಮದಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹರಿಹರೇಶ್ವರ ಸ್ವಾಮಿ ದೇವಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿದರು.


ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿರುವ ದೇವಾಲಯಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆ ದಿಕ್ಕಿನಲ್ಲಿ ಹರಿಹರಪುರ ಗ್ರಾಮಸ್ಥರು ದೇವಾಲಯಗಳ ಸಂರಕ್ಷಣೆ ಮಾಡಿ, ಜೀರ್ಣೋದ್ಧಾರ ಮಾಡುವ ಮೂಲಕ ಇಡೀ ನಾಗರಿಕ ಸಮಾಜವೇ ಮೆಚ್ಚುವ ಕೆಲಸ ಮಾಡಿದ್ದಾರೆ ಎಂದರು.


ಶಾಸಕ ಎಚ್.ಟಿ.ಮಂಜು ಮಾತನಾಡಿ, ನಾನು ವಿಪಕ್ಷಕ್ಕೆ ಸೇರಿರುವ ಶಾಸಕನಾಗಿದ್ದರೂ ತಾಲೂಕಿನ ಸಮಗ್ರವಾದ ಅಭಿವೃದ್ಧಿಗೆ ದುಡಿಯಲು ಬದ್ಧನಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ ಹರಿಹರೇಶ್ವರ ಮೂಲ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ನನಗೆ ಗೆಲುವು ನೀಡುವಂತೆ ಪ್ರಾರ್ಥನೆ ಸಲ್ಲಿಸಿದ್ದೆ. ಅಪಾರ ಶಕ್ತಿ ಹೊಂದಿರುವ ದೇವಾಲಯ ಹಾಗೂ ದೇವರಿಗೆ ಅಪಾರವಾದ ಶಕ್ತಿಯಿದೆ ಎಂಬುದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿಯಾಗಿದ್ದೇನೆ ಎಂದರು.


ಮಂಡ್ಯ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಮಡವಿನಕೋಡಿ ಹರೀಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್, ಎಪಿಎಂಸಿ ಮಾಜಿ ಅಧ್ಯಕ್ಷ ಜಯಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಗ್ರಾಮದ ಮುಖಂಡರಾದ ಗಣೇಶಗೌಡ, ಮಹದೇವೇಗೌಡ, ಬೊಮ್ಮೇನಹಳ್ಳಿ ಹರ್ಷ ಮತ್ತಿತರರು ಭಾಗವಹಿಸಿದ್ದರು.


ದೇವಾಲಯ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಮಂಜು ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಎತ್ತಿನಗಾಡಿಯಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net