ಚಿಕ್ಕಬಳ್ಳಾಪುರ: ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟಿಸಿತು. ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಕೆಲ ಕಾಲ ರಸ್ತೆ ತಡೆ ಕೈಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಆದೇಶಿಸಿದ್ದಾರೆ. ಕಾನೂನಿಗೆ ತಲೆ ಭಾಗುವುದರ ಬದಲು ಪ್ರತಿಭಟನೆಗಳ ನಾಟಕದ ಮೂಲಕ ವಿರೋಧಿಸಲಾಗುತ್ತಿದೆ. ಇದರಲ್ಲಿಯೇ ಅವ್ಯವಹಾರ, ಭಯವಿರುವುದು ತಿಳಿದು ಬರುತ್ತದೆ. ತಾಕತ್ತು ಇದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ, ತನಿಖೆಯನ್ನು ಎದುರಿಸಲಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುನಿರಾಜು ಸವಾಲೆಸೆದರು. ರಾಜ್ಯದಲ್ಲಿ ಆಡಳಿತ ಯಂತ್ರಾಂಗ ವ್ಯವಸ್ಥೆಯು ಕೆಟ್ಟು ಹೋಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣ ಸೇರಿದಂತೆ ಸಾಕಷ್ಟು ಭ್ರಷ್ಟಾಚಾರ ಬಯಲಿಗೆ ಬರುತ್ತಿದೆ. ಮತ್ತೊಂದೆಡೆ ಅಭಿವೃದ್ಧಿ ಕೆಲಸಗಳು ನಿಂತು ಹೋಗಿದ್ದು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಗತಿದಾಯಕ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರಾಮಲಿಂಗಪ್ಪ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಿದ್ದಾರೆ. ಭ್ರಷ್ಟಾಚಾರಕ್ಕೆ ಬೇಸತ್ತು ಹೋಗಿದ್ದು ಇದರ ನಡುವೆಯೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಭಂಡತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಕ್ತ ಮುನಿಯಪ್ಪ ಮಾತನಾಡಿ, ದುರಾಡಳಿತ, ಅವ್ಯವಹಾರಗಳನ್ನು ಮುಚ್ಚಿಕೊಳ್ಳಲು ಇತರರ ವಿರುದ್ಧ ಸುಳ್ಳು ಆರೋಪಗಳ ಮೂಲಕ ಜನರ ದಿಕ್ಕು ತಪ್ಪಿಸುವ ರಾಜ್ಯ ಸರ್ಕಾರದ ಧೋರಣೆಯು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ಸೀಕಲ್ ರಾಮಚಂದ್ರಗೌಡ, ಎಸ್ ಆರ್ ರ್ಎಸ್ ದೇವರಾಜ್, ಮರುಳುಕುಂಟೆ ಕೃಷ್ಣಮೂರ್ತಿ, ಮುರಳೀಧರ್, ಎ.ವಿ.ಭೈರೇಗೌಡ, ಆನಂದ್ ಅನು, ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.