

ಕೋಲಾರ: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಎಲ್ಲ ಸಮುದಾಯಗಳು ಮುಂದೆ ಬರುವ ಉದ್ದೇಶದಿಂದ ಜಾತಿ ಜನಗಣತಿ ವರದಿ ಜಾರಿಗೊಳಿಸಲು ಒತ್ತಾಯಿಸಿ ಜಿಲ್ಲಾ ಕುರುಬರ ಸಂಘದಿಂದ ಅಪರ ಜಿಲ್ಲಾಧಿಕಾರಿ ಮಂಗಳಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಂಬಿಹಳ್ಳಿ ಟಿ.ವಿ.ಮುನಿಯಪ್ಪ ಮಾತನಾಡಿ, ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಮೇಷ ಏಣಿಸುವ ಅಗತ್ಯವಿಲ್ಲ. 159 ಕೋಟಿ ರೂ.ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.
ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರ ಬಗ್ಗೆ ಅಪಾರ ಕಾಳಜಿ ಇರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೂ ಅನುಕೂಲ ಆಗುವ ಜಾತಿ ಜನಗಣತಿ ವರದಿ ಒಪ್ಪಿ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸುವುದಾಗಿ ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು, ಕೊಟ್ಟ ಮಾತಿನಂತೆ ವರದಿ ಬಿಡುಗಡೆ ಮಾಡಬೇಕು ಎಂದರು.