

ಹಾನಗಲ್ಲ: ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ನದಿ ಜೋಡಣಾ ಹೋರಾಟ ಸಮಿತಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಪಟ್ಟಣದಲ್ಲಿ ಮನವಿ ಸಲ್ಲಿಸಿದರು.
ರಾಷ್ಟ್ರೀಯ 30 ನದಿ ಜೋಡಣೆ ಯೋಜನೆಯಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಒಂದಾಗಿದೆ. 2021ರ ಮುಂಗಡ ಪತ್ರದಲ್ಲಿ ರಾಜ್ಯ ಸರ್ಕಾರ ಸಮಗ್ರ ಯೋಜನಾ ವರದಿ ತಯಾರಿಸಲು ಸೂಚಿಸಿತ್ತು. ರಾಜ್ಯ ಸಂಪನ್ಮೂಲ ಇಲಾಖೆಗೆ ಯೋಜನಾ ವರದಿಯನ್ನೂ ಸಲ್ಲಿಸಲಾಗಿದೆ. ಈ ಯೋಜನೆ ಅನುಷ್ಠಾನದ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ, 7 ಜಿಲ್ಲೆಗಳ ರೈತರ ಹಿತ ಕಾಯುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಇದು ಹೋರಾಟದ ಹಾದಿ ಹಿಡಿಯುವ ಮೊದಲು ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಬೇಡ್ತಿ-ವರದಾ ನದಿ ಜೋಡಣೆ ಹೋರಾಟ ಸಮಿತಿ ಅಧ್ಯಕ್ಷ ಎಸ್.ಎಂ. ಕೋತಂಬರಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಬಸವರಾಜ ಹಾದಿಮನಿ, ಜೆಡಿಎಸ್ ತಾಲೂಕಾಧ್ಯಕ್ಷ ಆರ್.ಬಿ. ಪಾಟೀಲ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.