ಗ್ಯಾರಂಟಿ ಯೋಜನೆಗಳ ಅನುಷ್ಠಾನ ಯಶಸ್ವಿ: ಮೋಹನ್ ದಾಸ್

5 yojana
Published on

ಮಡಿಕೇರಿ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಫಲಾನುಭವಿಗಳಿಗೆ ಎಲ್ಲಾ ಸೌಲಭ್ಯ ದೊರೆಯುತ್ತಿದೆ ಎಂದು ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಜಿ.ಮೋಹನ್ ದಾಸ್ ಅವರು ತೃಪ್ತಿ ವ್ಯಕ್ತಪಡಿಸಿದರು.


ಮಡಿಕೇರಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿಯ ಸದಸ್ಯರು ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.


ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಕುಂದುಕೊರತೆ ಸಭೆಯನ್ನು ನಡೆಸಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಲ್ಲಾ ಸದಸ್ಯರು ಮುಂದಾಗಬೇಕು. ಈ ಪ್ರಯತ್ನಕ್ಕೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಪಡೆಯಲಾಗುವುದು ಎಂದು ತಿಳಿಸಿದರು.


ಕೆಲವು ಸದಸ್ಯರು ಮಾತನಾಡಿ, ಪೆರಾಜೆ ವ್ತಾಪ್ಯಿಯಲ್ಲಿ ಎಲ್ಲಾ ಘಟಕದ ಬಸ್‌ಗಳ ನಿಲುಗಡೆಗೆ ಆದೇಶವಿದ್ದರೂ ನಿಲುಗಡೆಗೊಳ್ಳುತ್ತಿಲ್ಲ. ಈ ಬಗ್ಗೆ ಟಿಸಿ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು. ಮುಕ್ಕೋಡ್ಲು ಗ್ರಾಮಕ್ಕೆ ಬೆಳಿಗ್ಗೆ ೭.೩೦ ಗಂಟೆಗೆ ಬರುವ ಸರ್ಕಾರಿ ಬಸ್ ಮಡಿಕೇರಿಯ ಬಸ್ ನಿಲ್ದಾಣಕ್ಕೆ ತೆರಳದೆ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮಾತ್ರ ಬಂದು ಡಿಪೋಗೆ ತೆರಳುತ್ತಿದೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.


ಸರ್ಕಾರ ೫ ಯೋಜನೆಗಳ ಇಲಾಖೆಯ ಅಧಿಕಾರಿಗಳು ಫಲಾನುಭವಿಗಳ ಮಾಹಿತಿ ನೀಡಿದರು. ಸಭೆಯಲ್ಲಿ ಸಮಿತಿಯ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net