

ಮೈಸೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ಒಳ ಮೀಸಲಾತಿ ಕಲ್ಪಿಸಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊರತುಪಡಿಸಿದರೆ ಉಳಿದವರೆಲ್ಲರೂ ಒಳ ಮೀಸಲಾತಿ ಪರವಾಗಿದ್ದಾರೆ. ಆದ್ದರಿಂದ ಒಳಮೀಸಲು ಜಾರಿ ವಿಷಯದಲ್ಲಿ ಬಿಜೆಪಿ ಹಿಂದೇಟು ಹಾಕುವುದಿಲ್ಲ ಎಂದರು.
ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ಸಮುದಾಯಗಳಿಗೆ ನ್ಯಾಯ ಒದಗಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ವರದಿಯ ಶಿಫಾರಸನ್ನು ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿರುವುದರಿಂದ ಎಲ್ಲರಿಗೂ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಒಗ್ಗೂಡಿಸಲು ನೆರವಾಗಬಹುದೇ ಹೊರತು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.