ಜಲ ಜೀವನ್ ಮಿಷನ್ ಅನುಷ್ಠಾನ ಜವಾಬ್ದಾರಿಯುತವಾಗಿರಲಿ

12
Published on

ಮೈಸೂರು: ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಎ.ಎಸ್. ರಂಜಿತ್‌ಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆ ಸಹಯೋಗದೊಂದಿಗೆ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಲಜೀವನ್ ಮಿಷನ್ ಯೋಜನೆಯಡಿ ವಾಶ್ ಕಾರ್ಯಕ್ರಮಗಳ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಾಡಬೇಕು. ಅದರ ನಡವಳಿಯನ್ನು ಜಿಲ್ಲಾ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಗಳಲ್ಲೂ ನೀರು ಸರಬರಾಜು ಮಾಡುವಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮೈಸೂರು ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೃಷ್ಣರಾಜು ಮಾತನಾಡಿ, ಪ್ರತಿ ಮನೆಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕಡೆಯಲ್ಲೂ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಬೇಕು ಎಂದು ಹೇಳಿದರು.

ಅಲ್ಲದೆ ಜಲ ಜೀವನ್ ಮಿಷನ್ ಯೋಜನೆಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು, ಪೂರ್ಣಗೊಂಡ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಬೇಕು. ನಿರ್ವಹಣೆ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ‘ರತ್ನಶ್ರೀ’ ಪ್ರಶಸ್ತಿ ಪುರಸ್ಕೃತ ಜಿ.ಎಂ.ಜೋಸೆಫ್ ರೆಬೆಲೊ ಅವರು ಶಿಬಿರಾರ್ಥಿಗಳಿಗೆ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಸಾಮರ್ಥ್ಯ ಅಭಿವೃದ್ಧಿಗೊಳಿಸಲು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮೈಸೂರು, ತಿ.ನರಸೀಪುರ ತಾಲೂಕುಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್‌ಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

ಮೈಸೂರು ಎಇಇ ಹರ್ಷಷ್ ಪಾಷಾ, ತಿ.ನರಸೀಪುರ ಎಇಇ ಕೆ.ಶಿವರಾಜು, ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಚೇತನ್ ಕುಮಾರ್, ಭಗೀರಥ ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿ ಚಂಗಪ್ಪ, ಜಲಜೀವ ಮಿಷನ್ ಯೋಜನೆಯ ಜಿಲ್ಲಾ ತಂಡದ ನಾಯಕ ಎಚ್.ಪಿ.ಮಹೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net