ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ: ಅಪ್ರಾಪ್ತೆ ಮೇಲೆ ಅತ್ಯಾಚಾರ ಅಪರಾಧ ಸಾಬೀತು

judge
Published on

ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ(ಪೋಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯ 10 ವರ್ಷ ಕಠಿಣ ಸಜೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್(27) ಶಿಕ್ಷೆಗೊಳಗಾದ ಅಪರಾಧಿ. 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಳು. ನಂತರ ಗರ್ಭಪಾತವಾಗಿತ್ತು. ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ಸಾವಿತ್ರಿ ವಿ.ಭಟ್ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ಹಾಗೂ ಪೋಕ್ಸೊ ಕಾಯ್ದೆಯಡಿ 10 ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಸೆ.9ರಂದು ತೀರ್ಪು ನೀಡಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ(ಪೊಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ. ಬೆಳ್ತಂಗಡಿಯ ಅಂದಿನ ಪ್ರಭಾರ ವೃತ್ತನಿರೀಕ್ಷಕ ಗೋವಿಂದರಾಜು ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಎರಡನೇ ಬಾರಿ ಕೃತ್ಯ: ಅಪರಾಧಿ ನವೀನ್ 2017ರಲ್ಲಿ ಈ ಪ್ರಕರಣದ ಸಂತ್ರಸ್ತೆಯ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದ. ಆಕೆ ಗರ್ಭವತಿಯಾಗಿದ್ದಳು. ಈ ಬಗ್ಗೆ ಪ್ರಕರಣ ದಾಖಲಾಗಿ ಬಂಧಿಸಲ್ಪಟ್ಟಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಯುವತಿ ವಯಸ್ಕಳಾದಾಗ ಆಕೆಯನ್ನೇ ವಿವಾಹವಾಗಿದ್ದ. ವಿವಾಹ ಬಳಿಕ ಪತ್ನಿಯ ಮನೆಯಲ್ಲಿಯೇ ವಾಸವಾಗಿದ್ದ ಆತ ಹಳೇ ಚಾಳಿ ಮುಂದುವರಿಸಿ ಪತ್ನಿಯ ಅಪ್ರಾಪ್ತ ವಯಸ್ಸಿನ ತಂಗಿ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net