

ಶ್ರೀರಂಗಪಟ್ಟಣ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜತೆಗೆ ಉತ್ತಮ ಸ್ನೇಹ ಬಾಂಧವ್ಯವು ವೃದ್ಧಿಯಾಗಲಿದೆ ಎಂದು ಮಾಜಿ ಶಾಸಕಿ ವಿಜಯಲಕ್ಷ್ಮಮ್ಮ ಬಂಡಿಸಿದ್ದೇಗೌಡ ಹೇಳಿದರು.
ಪತ್ರಿಕಾ ದಿನಾಚರಣೆ ಪ್ರಯುಕ್ತ ಪಟ್ಟಣದ ಶ್ರೀರಂಗನಾಥಸ್ವಾಮಿ ಕ್ರೀಡಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ವಿವಿಧ ಇಲಾಖೆಗಳೊಂದಿಗೆ ಹಮ್ಮಿಕೊಂಡಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಹೃದಯಾಘಾತಗಳ ಆಘಾತಕಾರಿ ಸುದ್ದಿಯೇ ಪ್ರಸಾರಗೊಳ್ಳುತ್ತಿದೆ. ಅದರಲ್ಲೂ ಪುಟ್ಟ ಮಕ್ಕಳಿಂದ ಯುವ ಜನರೇ ಹೆಚ್ಚಾಗಿ ಸಾವಿಗೀಡಾಗುತ್ತಿರುವುದು ಸಾಕಷ್ಟು ಆತಂಕ ಹೆಚ್ಚಿಸುತ್ತಿದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢ ಆರೋಗ್ಯ ಕಾಯ್ದುಕೊಂಡು ದೈಹಿಕವಾಗಿ ಸಮಸ್ಥಿತಿ ಸುಧಾರಿಸಿಕೊಳ್ಳಬೇಕು ಎಂದರು.
ಶಾಸ್ವತಿ ಧಾರ್ಮಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಹಾಗೂ ಜ್ಯೋತಿಷಿ ಡಾ.ಭಾನುಪ್ರಕಾಶ್ ಶರ್ಮಾ ಮಾತನಾಡಿ, ಶ್ರೀರಂಗಪಟ್ಟಣ ಪತ್ರಕರ್ತರು ಹೆಚ್ಚು ಕ್ರಿಯಾಶೀಲರಾಗಿದ್ದು, ದಿನನಿತ್ಯದ ಸುದ್ದಿಯ ಜತೆಗೆ ಕ್ರೀಡೆ ಹಾಗೂ ಇತರ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸಕ್ರಿಯರಾಗಿದ್ದಾರೆ. ಕ್ರೀಡಾ ಚಟುವಟಿಕೆಗಳಿಗೆ ಅವರು ಸದಾ ಬೆಂಬಲವಾಗಿದ್ದು, ವಸ್ತುನಿಷ್ಠ ವರದಿಗಳ ಮೂಲಕ ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿರುವುದು ಪ್ರಶಂಸದಾಯಕವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಪುರಸಭೆ ಅಧ್ಯಕ್ಷ ಎಂ.ಎಲ್.ದಿನೇಶ್ ಮಾತನಾಡಿ, ತಾಲೂಕು ಪತ್ರಕರ್ತರಿಗೆ ಭವನ ನೀಡಲಾಗಿದ್ದು, ಶೀಘ್ರದಲ್ಲಿಯೇ ಅದರ ಖಾತೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್, ಡಿವೈಎಸ್ಪಿ ಶಾಂತಮಲ್ಲಪ್ಪ, ಪರಿವರ್ತನ ಮತ್ತು ಓಂಶ್ರೀನಿಕೇತನ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಪುಟ್ಟೇಗೌಡ, ಮುಖಂಡರಾದ ಕೆ.ಜೆ.ರವಿಶಂಕರ್, ಲೋಕೇಶ್, ಮ.ರ.ವೇ ಅಧ್ಯಕ್ಷ ಶಂಕರ್ ಬಾಬು ಇತರರು ಇದ್ದರು.