

ಸೋಮವಾರಪೇಟೆ: ಯಡೂರು ಗ್ರಾಮದ ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಯ ಸೋಮವಾರ ನಡೆಯಿತು.
ವಿದ್ಯಾರ್ಥಿಗಳು ಕಾಲೇಜಿನ ಸುತ್ತ ಬೆಳೆದಿದ್ದ ಕಳೆ ಸಸಿಗಳನ್ನು ಕಿತ್ತು, ಪ್ಲಾಸ್ಟಿಕ್ ವಸ್ತುಗಳು ಮತ್ತು ತ್ಯಾಜ್ಯವಸ್ತುಗಳನ್ನು ಹೆಕ್ಕಿ ತೆಗೆದು ವಿಲೇವಾರಿ ಮಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಎಚ್.ಧನಲಕ್ಷ್ಮೀ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಎಂ.ಎಂ.ಸುನಿತಾ ಮಾತನಾಡಿ, ಸ್ವಚ್ಛತೆಯ ವಿವಿಧ ಮಜಲುಗಳು, ಶಿಸ್ತು, ಸ್ವಚ್ಛತೆ ಮತ್ತು ಸಮಯಪಾಲನೆಗಳು ಯಶಸ್ಸಿನ ಮೆಟ್ಟಿಲುಗಳು. ಅವುಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ.ಎಂ.ಎಸ್.ಶಿವಮೂರ್ತಿ ಅವರು ಸ್ವಚ್ಛತಾ ಹೀ ಸೇವಾ ಅಭಿಯಾನದ ಮಹತ್ವದ ಕುರಿತು ಮಾಹಿತಿ ನೀಡಿ, ಪ್ರತಿಜ್ಞಾವಿಧಿ ಬೋಧಿಸಿದರು.