ಜಿಪಂ ತಾಪಂ ಚುನಾವಣೆಗೆ ತಾತ್ವಿಕ ಒಪ್ಪಿಗೆ

RON HK PATIL
Published on

ರೋಣ: ಮೇ ಅಥವಾ ಜೂನ್​ನಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರದ ತಾತ್ವಿಕ ಒಪ್ಪಿಗೆ ದೊರೆತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆಮನೆಗೆ ತಲುಪಿಸಬೇಕು ಎಂದು ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಎಂದರು.

ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಬಡವರ ಪರ ಪಕ್ಷವಾಗಿದ್ದು, ಬಡ ಜನತೆಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ 20 ಅಂಶಗಳ ಕಾರ್ಯಕ್ರಮದ ಮೂಲಕ ಬಡವರಿಗೆ ಸಹಾಯ ಮಾಡಿದ್ದರು. ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿ, ಬೂತ್ ಮಟ್ಟದಲ್ಲಿ ಹೆಚ್ಚಿನ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆತರುವ ಕೆಲಸ ಪ್ರಾರಂಭಿಸಲಾಗುವುದು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಯುವ ಘಟಕ ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸಲಿದೆ ಎಂದರು.

ರೋಣ ಶಾಸಕ ಜಿ.ಎಸ್. ಪಾಟೀಲ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ, ಪಿ.ಬಿ. ಅಳಗವಾಡಿ, ಸಿದ್ದಣ್ಣ ಬಂಡಿ, ಪ್ರಭು ಮೇಟಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ, ಅಕ್ಷಯ ಪಾಟೀಲ, ಅಶೋಕ ಮಂದಾಲಿ, ದಶರಥ ಗಾಣಿಗೇರ, ಬಸವರಾಜ ನವಲಗುಂದ, ವೀರಣ್ಣ ಶೆಟ್ಟರ, ವಿ.ಆರ್. ಗುಡಿಸಾಗರ, ಅಶೋಕ ಬಾಗಮರ, ಎಚ್.ಎಸ್. ಸೋಂಪೂರ, ಶರಣಗೌಡ ಪಾಟೀಲ, ಶಿವರಾಜ ಘೊರ್ಪಡೆ, ಗೀತಾ ಮಾಡಲಗೇರಿ, ಯಚ್ಚರಗೌಡ ಗೋವಿಂದಗೌಡ್ರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net