ಪರೀಕ್ಷೆಯಲ್ಲಿ ಲೋಪವಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿ ವೆಂಕಟೇಶ ಸೂಚನೆ

dc exam meeting
)ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಡಿಸಿ ಟಿ.ವೆಂಕಟೇಶ ಅಧ್ಯಕ್ಷತೆಯಲ್ಲಿ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
Published on

ಹೊಸಪೇಟೆ: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಗರದ ಏಳು ಪರೀಕ್ಷಾ ಕೇಂದ್ರಗಳಲ್ಲಿ ಮೇ 20, 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಆಯೋಜಿಸಲಾಗಿದ್ದು, ಯಾವುದೇ ಲೋಪವಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಅಧಿಕಾರಿಗಳಿಗೆ ಸೂಚಿಸಿದರು.

ಎರಡು ದಿನಗಳ ಕಾಲ ಸಾಮಾನ್ಯ ಪ್ರವೇಶ ಪರೀಕ್ಷೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಪೂರ್ವಭಾವಿ ಸಭೆ ನಡೆಸಿದ ಅವರು, ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಯೋಗ, ನ್ಯಾಚುರೋಪತಿ, ಫಾರ್ಮಸಿ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಲ್ಕು ವಿಷಯಗಳನ್ನು ಒಳಗೊಂಡು ಎರಡು ದಿನಗಳ ಕಾಲ ಸಾಮಾನ್ಯ ಪ್ರವೇಶ ಪರೀಕ್ಷೆ ಆಯೋಜಿಸಿದೆ. ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಎರಡು ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಇರಬೇಕು.

ನೋಂದಾಯಿತ ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಇರಬೇಕು. ವಿದ್ಯಾರ್ಥಿಗಳ ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿ ಪರಿಶೀಲನೆ ಜತೆಗೆ ಪ್ರಶ್ನೆ ಪತ್ರಿಕೆ, ಓಎಂಆರ್ ಪ್ರತಿಕೆಗಳನ್ನು ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸಬೇಕು ಎಂದು ತಿಳಿಸಿದರು.


ಪರೀಕ್ಷಾ ಕೇಂದ್ರದಲ್ಲಿ ಹಾಗೂ ಪ್ರಶ್ನೆ ಪತ್ರಿಕೆ ರವಾನೆ ವೇಳೆ ಅಗತ್ಯ ಪೊಲೀಸ್ ಭದ್ರತೆ ಕೈಗೊಳ್ಳಬೇಕು. ಪರೀಕ್ಷಾ ವೀಕ್ಷಕರು ಪರೀಕ್ಷಾ ಸಮಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದರೂ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕೆಂದು ಆದೇಶಿಸಿದರು.

3,226 ವಿದ್ಯಾರ್ಥಿಗಳು ನೋಂದಣಿ:


ಸಿಇಟಿ ಪರೀಕ್ಷೆಗೆ ಈ ಬಾರಿ ಜಿಲ್ಲೆಯ 3,226 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನಗರದ ಏಳು ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 456, ಟಿಬಿ ಡ್ಯಾಂನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 360, ವಿಜಯನಗರ ಕಾಲೇಜಿನಲ್ಲಿ 706, ಗುರು ಪದವಿ ಪೂರ್ವ ಕಾಲೇಜಿನಲ್ಲಿ 288, ಚಿತ್ತವಾಡ್ಗಿಯ ಪದವಿ ಪೂರ್ವ ಕಾಲೇಜಿನಲ್ಲಿ 408, ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ 384 ಹಾಗೂ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ 624 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.ಪರೀಕ್ಷಾ ಕೇಂದ್ರದಲ್ಲಿ ಮೂಲಸೌಕರ್ಯ ಒದಗಿಸಲಾಗುತ್ತದೆ.

ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್

ಈಗಾಗಲೇ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ, ಅಧಿಕಾರಿಗಳಿಗೆ ಮಾರ್ಗಸೂಚಿಗಳ ಮಾಹಿತಿ ನೀಡಲಾಗಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆ ಪತ್ರಿಕೆ, ಓಎಂಆರ್ ಪತ್ರಿಕೆಗಳ ಸೀಲ್ ಓಪನ್ ಮಾಡುವ ಹಾಗೂ ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಸಹ ಮಾಡಲಾಗುತ್ತದೆ.
ಪ್ರವೇಶ ಪರೀಕ್ಷೆ ಬರೆಯಲಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರಾಧಿಕಾರದಿಂದ ಒಂದು ಗಂಟೆಗೆ 20 ನಿಮಿಷ ಹೆಚ್ಚುವರಿ ಕಾಲಾವಕಾಶ ಒದಗಿಸಲಾಗುತ್ತದೆ.


ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಹಶೀಲ್ದಾರ್ ಪ್ರತಿಭಾ, ವಿವಿಧ ಕಾಲೇಜುಗಳ ಪ್ರಾಚಾರ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net