ಗ್ಯಾರಂಟಿ ಅನುಸರಿಸುತ್ತಿರುವ ವಿಪಕ್ಷಗಳು: ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

Inauguration ceremony Mandya
Published on

ಮಂಡ್ಯ: ಗ್ಯಾರಂಟಿ ಯೋಜನೆ ವಿರೋಧಿಸುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್‌ನವರೇ ಅನುಸರಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ನ ಜನಪರ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷೆ ಎಚ್.ಬಿ.ಶುಭದಾಯಿನಿ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಒಂದು ಸೇವಾ ಕ್ಷೇತ್ರವಾಗಿದ್ದು, ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವಂತೆ ಕಾರ್ಯಕರ್ತರು ಮತ್ತು ಮುಖಂಡರು ಮಾಡಬೇಕಿದೆ. ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವುದಕ್ಕೆ ದಿನೇಶ್ ಗೂಳಿಗೌಡ ಅವರಿಗೆ ಗ್ಯಾರಂಟಿ ಸಮಿತಿಯ ರಾಜ್ಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಕಾಂಗ್ರೆಸ್ ನೀಡಿದೆ. ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮಂಡ್ಯ ಜಿಲ್ಲೆಗೆ ಮೊದಲ ಆದ್ಯತೆಯಾಗಿ ನೋಡುವುದು ಮುಖ್ಯವಾಗಬೇಕು. ಮಂಡ್ಯ ಜಿಲ್ಲೆಯ ಏಳೂ ತಾಲ್ಲೂಕಿನಲ್ಲಿಯೂ ಮಹಿಳಾ ಕಾಂಗ್ರೆಸ್ ಚುರುಕಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರ ಶ್ರಮವಿದೆ. ಅದರ ಭಾಗವಾಗಿಯೇ 136 ಶಾಸಕರಾಗಿ ಗೆಲುವು ಪಡೆದರು. ಜತೆಗೆ ಉಪ ಚುನಾವಣೆಯಲ್ಲಿಯೂ ಎರಡು ಸ್ಥಾನಗಳನ್ನು ಪಡೆದು ಒಟ್ಟು 138 ಸ್ಥಾನಗಳನ್ನು ಪಡೆದಿದ್ದೇವೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಜನಪರ ಯೋಜನೆಯನ್ನು ಕೊಟ್ಟರು. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸತತವಾಗಿ ಹೋರಾಟ ಮಾಡಿ ಅಧಿಕಾರಕ್ಕೆ ಬರಲು ಕಾರಣರಾದರು. ಕಳೆದ 70 ವರ್ಷಗಳಲ್ಲಿಯೇ ಗ್ಯಾರಂಟಿಯಂತಹ ಜನಪರ ಯೋಜನೆಯನ್ನು ಯಾರೂ ಜಾರಿಗೊಳಿಸಿರಲಿಲ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ತರಲಾಗಿದೆ. ಬರೋಬ್ಬರಿ 56 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗೆ ಖರ್ಚು ಮಾಡುತ್ತಾ ಬಂದಿದ್ದೇವೆ ಎಂದರು.

ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾರೆಡ್ಡಿ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಹಾಲಹಳ್ಳಿ ರಾಮಲಿಂಗಯ್ಯ, ಅಪ್ಪಾಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net