

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ಯೋಜನೆಯಿಂದ ಹೊರಗುಳಿದ ಅರ್ಹರನ್ನು ಗುರುತಿಸಿ ಪ್ರತೀ ತಾಲೂಕು ಮಟ್ಟದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.
ಬುಧವಾರ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಪಡಸಾಲೆಯಲ್ಲಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಮಾಜಿ ಶಾಸಕ ಅಭಯಚಂದ್ರ ಮಾತನಾಡಿ, ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಪಂಚ ಗ್ಯಾರಂಟಿ ಯೋಜನೆ ಪ್ರಯೋಜನ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು. ಜನಪ್ರತಿನಿಧಿಗಳು ತಮಗೆ ಸಿಕ್ಕ ಅಧಿಕಾರವನ್ನು ವೈಭವದ ಜೀವನ ನಡೆಸುವುದಕ್ಕೆ ಬಳಸಿಕೊಳ್ಳದೆ ಜನಸೇವಕರಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಮೂಡ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಕಾರ್ಯದರ್ಶಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಮಿತಿ ಸದಸ್ಯರು, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.