

ಮೈಸೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿಯಿಂದ ನಗರದಲ್ಲಿ ಮಂಗಳ ವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಮಹದೇಶ್ವರ ರಸ್ತೆಯ ಹಳೆಯ ಹಾಲಿನ ಡೇರಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎತ್ತಿನ ಗಾಡಿ, ಜಟಕಾ ಗಾಡಿಗಳೊ ಂದಿಗೆ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಪೆಟ್ರೋಲ್ ಹಾಕಿಸಲು ಹಣವಿಲ್ಲ ಎಂದು ಹಳೆಯ ಬೈಕ್‌ವೊಂದಕ್ಕೆ ಬೆಂಕಿ ಹಚ್ಚಲು ಮುಂದಾದ ಸಂದರ್ಭ ಪೊಲೀಸರು ತಡೆದು ಬೈಕ್‌ಅನ್ನು ವಶಕ್ಕೆ ಪಡೆದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ತೆರೆದ ವಾಹನ ಏರಿ ಮೆರವಣಿಗೆಯಲ್ಲಿ ಪಾಲ್ಗೊಂಡರೆ ಕಾರ್ಯಕರ್ತರು ಎತ್ತಿನ ಗಾಡಿ, ಜಟಕಾ ಗಾಡಿ ಏರಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಸಾಗಿದರು. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭ ಪೊಲೀಸರು ಬ್ಯಾರಿಕೇಡ್‌ಗಳನ್ನು ಇಟ್ಟು ತಡೆಯೊಡ್ಡಿದರು.
ಪ್ರತಿಭಟನೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮಾಜಿ ಮೇಯರ್‌ಗಳಾದ ಸಂದೇಶ್ ಸ್ವಾಮಿ, ಶಿವಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ, ಮಿರ್ಲೆ ಶ್ರೀನಿವಾಸ ಗೌಡ, ಕಾಂಪೋಸ್ಟ್ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಶಿವಕುಮಾರ್ ಹಾಗೂ ಇತರರು ಪಾಲ್ಗೊಂಡಿದ್ದರು.