

ಅವಿನಾಶ್ ಜೈನಹಳ್ಳಿ ಮೈಸೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಭಾವಿ ಸಚಿವರಾಗಿರುವ ಡಾ.ಎಚ್.ಸಿ.ಮಹದೇವಪ್ಪ ಅವರ ತವರು ಹಾಗೂ ರಾಜ್ಯ ರಾಜಕೀಯದ ಶಕ್ತಿಕೇಂದ್ರ ಎಂದೇ ಬಿಂಬಿತವಾಗಿರುವ ಮೈಸೂರು ಜಿಲ್ಲೆಯಲ್ಲಿ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಜಿಲ್ಲೆಯವರನ್ನೇ ಹೆಚ್ಚು ಪರಿಗಣಿಸಬೇಕೆಂಬ ಕೂಗು ಕೇಳಿಬರುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆಯುತ್ತಿದ್ದರೂ ನಿಗಮ- ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ನೇಮಕ ನನೆಗುದಿಗೆ ಬಿದ್ದಿದೆ. ಈ ಸ್ಥಾನಗಳಿಗೆ ಜಿಲ್ಲೆಯವರನ್ನೇ ಹೆಚ್ಚು ಪರಿಗಣಿಸಿ, ಮೈಸೂರಿಗರಿಗೆ ಆದ್ಯತೆ ನೀಡಬೇಕು ಎಂಬುದು ಪಕ್ಷದ ಮುಖಂಡರ ಒತ್ತಾಯವಾಗಿದೆ. ಮುಡಾ, ವಸ್ತುಪ್ರದರ್ಶನ ಪ್ರಾಧಿಕಾರ, ಮೃಗಾಲಯ ಪ್ರಾಧಿಕಾರ, ಕಾಡಾ, ಮೈಲ್ಯಾಕ್, ಜಂಗಲ್ ಲಾಡ್ಜ್ ಆ್ಯಂಡ್ ರೆಸಾರ್ಟ್ಸ್ ಸೇರಿದಂತೆ ಹತ್ತಾರು ನಿಗಮ-ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಗಳ ಮೇಲೆ ಜಿಲ್ಲೆಯ ಕಾಂಗ್ರೆಸ್ ಕಟ್ಟಾಳುಗಳು ಕಣ್ಣಿಟ್ಟಿದ್ದು, ಸ್ಥಾನ ಗಿಟ್ಟಿಸಿಕೊಳ್ಳಲು ತಮ್ಮ ನಾಯಕರ ಹಿಂದೆ ಬಿದ್ದು ಕಸರತ್ತು ನಡೆಸಿದ್ದಾರೆ.
ವಾರದ ಹಿಂದೆಯಷ್ಟೇ ನಿಗಮ, ಮಂಡಳಿಗಳಿಗೆ ಪದಾಧಿಕಾರಿಗಳ ನೇಮಕದ ಸುದ್ದಿ ಹೊರಬೀಳುತ್ತಿದ್ದಂತೆ ಪಕ್ಷದ ಮುಖಂಡರು ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಕದ ತಟ್ಟಿದ್ದರು. ಆದರೆ ಈ ಪ್ರಕ್ರಿಯೆ ಇನ್ನೂ ವಿಳಂಬವಾಗುವುದನ್ನರಿತ ಕೆಲವು ಆಕಾಂಕ್ಷಿಗಳು ತಟಸ್ಥವಾಗಿದ್ದರೆ, ಇನ್ನೂ ಹಲವರು ತಮ್ಮ ಪ್ರಯತ್ನವನ್ನು ಮುಂದುವರಿಸಿದ್ದಾರೆ.
ಸದ್ಯಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಮತ್ತು ಎರಡು ಸಚಿವ ಸ್ಥಾನ ಒಲಿದಿದೆ. ಇದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ತಂದಿರುವುದಷ್ಟೇ ಅಲ್ಲದೆ, ಪಕ್ಷ ಸಂಘಟನೆಗೆ ಅನುಕೂಲವಾಗಿದೆ. ಇದರ ಜತೆಗೆ, ಜಿಲ್ಲೆಯಲ್ಲಿ ಮತ್ತಷ್ಟು ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಯಾಗಲು ನಿಗಮ, ಮಂಡಳಿಗಳಲ್ಲಿ ಮೈಸೂರಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂಬ ಮಾತು ಪಕ್ಷದ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ಹಾಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಗ್ರಾಮೀಣ ಮತ್ತು ನಗರ ಭಾಗದ ಇಪ್ಪತ್ತಕ್ಕೂ ಹೆಚ್ಚು ಆಕಾಂಕ್ಷಿಗಳು ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇವರಲ್ಲಿ ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮತ್ತು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನ ನೀಡುವ ಮಾತು ಕೇಳಿಬಂದಿದೆ. ಇವರಲ್ಲಿ ಅನಿಲ್ ಚಿಕ್ಕಮಾದು ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗಿದೆ.
ಪಟ್ಟಿ ದೊಡ್ಡದು: ನಿಗಮ- ಮಂಡಳಿ ಅಧ್ಯಕ್ಷರ ಸ್ಥಾನಕ್ಕೆ ಕೆ.ಆರ್. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಪಾಲಿಕೆ ಮಾಜಿ ಸದಸ್ಯ ಅಯೂಬ್ ಖಾನ್, ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಕೆ. ಮರಿಗೌಡ, ಗುರುಪಾದಸ್ವಾಮಿ, ಟಿ.ಎಸ್. ರವಿಶಂಕರ್, ಕೃಷ್ಣಕುಮಾರ್, ಜಿಪಂ ಮಾಜಿ ಸದಸ್ಯ ರಾಕೇಶ್ ಪಾಪಣ್ಣ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಪಾಲಿಕೆ ಮಾಜಿ ಸದಸ್ಯೆ ಪುಷ್ಪಲತಾ ಚಿಕ್ಕಣ್ಣ ಸೇರಿದಂತೆ ಅನೇಕರು ಪೈಪೋಟಿ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರ ಲೋಕಸಭಾ ಚುನಾವಣೆಯೊಳಗೆ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಮಾಡಿದರೆ, ಅವಕಾಶ ವಂಚಿತರಿಂದ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮುಗಿಯುವವರೆಗೂ ನೇಮಕಾತಿಗೆ ಕೈ ಹಾಕಬಾರದು ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎಂಬ ಮಾತು ಸಹ ಕೇಳಿಬಂದಿದೆ.
ಒಂದು ವೇಳೆ ಸರ್ಕಾರ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಮುಂದೂಡಿದರೆ ಆಕಾಂಕ್ಷಿಗಳಲ್ಲಿ ನಿರಾಸೆ ಉಂಟಾದರೂ ಯಾವುದೇ ಭಿನ್ನಮತವಾಗಲಿ, ಅಸಮಾಧಾನವಾಗಲಿ ಉಂಟಾಗುವುದಿಲ್ಲ ಎನ್ನುವುದು ಪಕ್ಷದ ವರಿಷ್ಠರ ಲೆಕ್ಕಾಚಾರವಾಗಿದೆ.
ಪಕ್ಷಕ್ಕಾಗಿ ಅನೇಕ ವರ್ಷಗಳಿಂದ ದುಡಿದಿರುವ ಮುಖಂಡರು ಮತ್ತು ಕಾರ್ಯಕರ್ತರಿಗೆ ವಿವಿಧ ನಿಗಮ ಮತ್ತು ಮಂಡಳಿ ಅಧ್ಯಕ್ಷ, ಸದಸ್ಯ ಸ್ಥಾನಗಳನ್ನು ನೀಡಲು ನಾಯಕರು ತೀರ್ಮಾನ ಮಾಡಿದ್ದಾರೆ. ಅಪಾರ ಆಕಾಂಕ್ಷಿಗಳಿದ್ದರೂ ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ.ಡಾ.ಬಿ.ಜೆ. ವಿಜಯ್‌ಕುಮಾರ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ