ಹೊಸ ತಂತ್ರಜ್ಞಾನ ಅಳವಡಿಕೆಯಿಂದ ಕೌಶಲ ಹೆಚ್ಚಳ

6 gkp .1
Published on

ಗೋಣಿಕೊಪ್ಪಲು: ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ನಮ್ಮ ಕೌಶಲ ಹೆಚ್ಚಿಸುತ್ತದೆ ಎಂದು ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್. ಸುಬ್ರಹ್ಮಣ್ಯ ಹೇಳಿದರು.

ಪೊನ್ನಂಪೇಟೆಯ ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಸಕ್ತ ಸಾಲಿನ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಜತೆಗೆ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕೊಡವ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಸಿ.ಪಿ.ಬೆಳ್ಳಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನಪೂರ್ತಿ ಕಲಿಕೆಯ ಮಹತ್ವವನ್ನು ಅರಿತುಕೊಳ್ಳಬೇಕು. ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ಬದುಕನ್ನು ರೂಪಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ನಿರ್ದೇಶಕ ಡಾ.ಪೊನ್ನಮ್ಮ ಮಾಚಯ್ಯ, ಕೊಡವ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಚಿಣ್ಣಪ್ಪ, ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಬಸವರಾಜ್‌ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾನು ತೇಜ್ ಅವರಿಗೆ ಶೈಕ್ಷಣಿಕ ಸಾಧನೆಗಾಗಿ ಘನತೆ ಪದವಿ ಸಹಿತ ಬಿಇ ಪದವಿ ಪ್ರದಾನ ಮಾಡಲಾಯಿತು. ಇದು ಕಾರ್ಯಕ್ರಮದ ವಿಶೇಷ ಕ್ಷಣವಾಯಿತು. ಪದವಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net