ಮಾಧ್ಯಮಗಳಿಗೆ ಸಾಮಾಜಿಕ ಜವಾಬ್ದಾರಿ ಹೆಚ್ಚಿದೆ; ಕುಲಸಚಿವ ಶಂಕರಗೌಡ ಸೋಮನಾಳ

WORK SHOP KSWU
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆದ ಟಿವಿ ನ್ಯೂಸ್ ಬುಲೆಟಿನ್ ಪ್ರೊಡಕ್ಷನ್ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮತ್ತು ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ. ಸಿಬಂತಿ ಪದ್ಮನಾಭ ಕೆ.ವಿ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಓಂಕಾರ ಕಾಕಡೆ, ಡಾ.ತಹಮೀನಾ ನಿಗಾರ್ ಸುಲ್ತಾನಾ ಮತ್ತಿತರರಿದ್ದಾರೆ.
Published on

ವಿಜಯಪುರ: ಮಾಧ್ಯಮಗಳಿಗೆ ಹೆಚ್ಚಿನ ಸಾಮಾಜಿಕ ಜವಾಬ್ದಾರಿಗಳಿದ್ದು ಇದನ್ನು ಸಮರ್ಥವಾಗಿ ನಿಭಾಯಿಸುವ ಹೊಣೆ ಪತ್ರಕರ್ತರದ್ದಾಗಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಮಿಡಿಯಾ ಕ್ಲಬ್ ಮತ್ತು ಐಎಎಸ್ ಅಧಿಕಾರಿ ಗಂಗೂಬಾಯಿ ಮಾನಕರ ಅವರು ತಮ್ಮ ಅಜ್ಜ ಮಲ್ಲಪ್ಪ ರಾಮಪ್ಪ ಮಾನಕರ ಅವರ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿನಿಧಿ ಅಡಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಟಿವಿ ನ್ಯೂಸ್ ಬುಲೆಟಿನ್ ಪ್ರೊಡಕ್ಷನ್ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪತ್ರಿಕೋದ್ಯಮ ಬಹಳ ಜವಾಬ್ದಾರಿ ಹೊಂದಿಂತಹ ಕ್ಷೇತ್ರ. ಅದರಿಂದ ಸಾಕಷ್ಟು ಅಭಿವೃದ್ಧಿ ಮತ್ತು ಸುಧಾರಣೆಗಳನ್ನು ನಾವು ಸಮಾಜದಲ್ಲಿ ತರಬಹುದು ಎಂದರು.

ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ.ಸಿಬಂತಿ ಪದ್ಮನಾಭ ಕೆ.ವಿ ಮಾತನಾಡಿ, ಮಾಧ್ಯಮ ಶಿಕ್ಷಣದಲ್ಲಿ ಪ್ರಯೋಗ ಬಹಳ ಮುಖ್ಯವಾಗುತ್ತದೆ. ಬರೀ ಪಠ್ಯಕ್ಕೆ ಮಾತ್ರ ನಾವು ಜಾಸ್ತಿ ಗಮನ ಕೊಡುತ್ತೇವೆ. ಆದರೆ ನಾವೆಲ್ಲರೂ ಪ್ರಯೋಗಕ್ಕೆ ಜಾಸ್ತಿ ಒತ್ತು ನೀಡಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಸಮೂಹ ಮಾಧ್ಯಮ ಕ್ಷೇತ್ರದಲ್ಲಿ ನಡೆಯುತ್ತಿರುವ ತಾಂತ್ರಿಕ ಆವಿಷ್ಕಾರಗಳನ್ನು ಮಾಧ್ಯಮ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ನಾವು ತರಗತಿಗಳನ್ನು ಮಾಧ್ಯಮ ಸಂಸ್ಥೆಗಳನ್ನಾಗಿ ಪರಿವರ್ತಿಸುವ ಈ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದರು.

ಮಾಧ್ಯಮ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಹೊಸ ಹೊಸ ಕೌಶಲಗಳನ್ನು ಕಲಿತುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಉದ್ಯೋಗವಕಾಶಗಳನ್ನು ಹೆಚ್ಚಿಸಿಕೊಳ್ಳಬೇಕು. ಇವತ್ತಿನ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಬೇಕಾದರೆ ಹೊಸ ಹೊಸ ಕೌಶಲಗಳನ್ನು ಕರಗತ ಮಾಡಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯಗಾರದ ವರದಿಯನ್ನು ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ ಮಂಡಿಸಿದರು. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿ ಅಭಿಷೇಕ್ ಶೆಟ್ಟಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಡಾ.ಮಂಜುನಾಥ ಆರ್ ಮತ್ತು ನಂದೀಶ್ ಎನ್, ತುಮಕೂರು ವಿವಿಯ ಡಾ.ಪೃಥ್ವಿರಾಜ್ ಟಿ, ವಿನಯಕುಮಾರ್ .ಎಸ್.ಎಸ್, ಅನನ್ಯ ಎಂ, ಅಭಿಷೇಕ ಎಂ.ವಿ ಮತ್ತು ತುಮಕೂರು ಹಾಗೂ ಬೆಂಗಳೂರು ಉತ್ತರ ವಿವಿಗಳ ಸ್ನಾತಕೋತ್ತರ ವಿದ್ಯಾರ್ಥಿಗಳು ಮಹಿಳಾ ವಿವಿಯ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ನಿಗಾರ್ ಸುಲ್ತಾನಾ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿಗಳಾದ ದೀಪಾ ತಟ್ಟಿಮನಿ ಅತಿಥಿಗಳನ್ನು ಪರಿಚಯಿಸಿದರು. ಸುಷ್ಮಾ ಪವಾರ ನಿರೂಪಿಸಿದರು. ಫಿಲೋಮಿನಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net