ನ.7 ರಿಂದ ಅನಿದಿರ್ಷ್ಟಾವಧಿ ಧರಣಿ

ನ.7 ರಿಂದ ಅನಿದಿರ್ಷ್ಟಾವಧಿ ಧರಣಿ
Published on

ಹನೂರು: ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ನ.7 ರಂದು ಪ್ರತಿ ತಾಲೂಕಿನಿಂದ ರೈತರು ಬೈಕ್ ರ‌್ಯಾಲಿಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ರೈತ ಸಂಘದ ಸಾಮೂಹಿಕ ನಾಯಕತ್ವದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದಲ್ಲಿ ಶನಿವಾರ ಆಯೋಜಿಸಿದ್ದ ವಿವಿಧ ತಾಲೂಕಿನ ರೈತ ಮುಖಂಡರೊಂದಿಗಿನ ಸಭೆಯಲ್ಲಿ ಮಾತನಾಡಿದರು.

ಹನೂರು ತಾಲೂಕು ವ್ಯಾಪ್ತಿಯಲ್ಲಿ ನಾಲ್‌ರೋಡ್, ಬಂಡಳ್ಳಿ ಮುಖ್ಯ ರಸ್ತೆ ಸೇರಿದಂತೆ ಇನ್ನಿತರ ಬಹುತೇಕ ರಸ್ತೆಗಳು ಹದಗೆಟ್ಟಿದೆ. ಇದರಿಂದ ವಾಹನ ಸವಾರರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ರಸ್ತೆ ಒತ್ತುವರಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಸ್‌ಗಳು ನಿಲುಗಡೆಯಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆ, ಕಾಲೇಜಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಪ್ರತಿ ಮನೆಗೂ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಅನುಷ್ಠಾನಗೊಂಡಿರುವ ಜಲಜೀವನ್ ಮಿಷನ್ ಯೋಜನೆ ಪೂರ್ಣಗೊಂಡಿಲ್ಲ. ಜಲಾಶಯಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆ ಅರ್ಧಕ್ಕೆ ನಿಂತಿದೆ. ಕಳೆದ ಒಂದು ತಿಂಗಳಿನಿಂದಲೂ ಉತ್ತಮ ಮಳೆಯಾಗುತ್ತಿದ್ದರೂ ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗುತ್ತಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇನ್ನು ಸರ್ಕಾರದಿಂದ ರೈತರಿಗೆ ಬರ ಪರಿಹಾರ ನೀಡಿಲ್ಲ. ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ರೈತರಿಗೆ ಬರಬೇಕಾದ ಹಾಲಿನ ಪ್ರೋತ್ಸಾಹ ಧನ ಹಲವು ತಿಂಗಳಿನಿಂದ ಬಾಕಿ ಇದೆ. ಜತೆಗೆ ಗುಂಡ್ಲುಪೇಟೆಯ ಬೇಗೂರು ಸಂತೆಯಲ್ಲಿ ಸುಂಕವನ್ನು ವಸೂಲಿ ಮಾಡಲಾಗುತ್ತಿದ್ದು, ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ಬರಗಿ ಹಾಗೂ ಕಳ್ಳೀಪುರದಲ್ಲಿರುವ ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ಹಾಗೂ ಕೊಳ್ಳೇಗಾಲ, ಯಳಂದೂರು, ಚಾಮರಾಜನಗರ ತಾಲೂಕಿನಲ್ಲೂ ಕೆಲವು ಸಮಸ್ಯೆಗಳಿವೆ. ಈ ದೆಸೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ರೈತರೆಲ್ಲರೂ ಒಟ್ಟುಗೂಡಿ ನ.7 ರಂದು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ. ಹಲವು ಸಮಸ್ಯೆಗಳಿಂದ ಹಾಗೂ ಹಿಂದುಳಿದಿರುವ ಚಾಮರಾಜನಗರ ಜಿಲ್ಲೆಗೆ ಅನುದಾನ ನೀಡುವಲ್ಲಿ ತಾತ್ಸಾರ ಮಾಡಲಾಗುತ್ತಿದೆ. ಡಿಸೆಂಬರ್‌ನಲ್ಲಿ ಮ.ಬೆಟ್ಟಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಹನೂರು ಮಾದಪ್ಪ, ಮಂಗಲದ ವಿಶ್ವೇಶ್ವರಪ್ರಸಾದ್, ಭೈರನತ್ತ ರಾಜು, ಶ್ರೀನಿವಾಸ್, ಮಹದೇವಸ್ವಾಮಿ, ನಂದೀಶ್, ಕೊಳ್ಳೇಗಾಲದ ವೀರಭದ್ರಸ್ವಾಮಿ, ನಿರಂಜನ್ ಮೂರ್ತಿ, ರಾಚಪ್ಪ, ವಿಶ್ವನಾಥ್, ಗುಂಡ್ಲುಪೇಟೆಯ ಲೋಕೇಶ್, ಮಹೇಶ್, ಪಾಪಣ್ಣ, ಶಂಕರ್, ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net