ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ

INDI-26-1
ಹುಚ್ಚಪ್ಪ ಶಿವಶರಣ
Published on

ಇಂಡಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪೌರ ನೌಕರರು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮೇ 27 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಶಿವಶರಣ ತಿಳಿಸಿದರು.

ಪುರಸಭೆ ಆವರಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೂ ಇನ್ನೂತನಕ ಪೌರಾಡಳಿತ ಸಚಿವರು, ಇಲಾಖೆ ಕಾರ್ಯದರ್ಶಿ, ಪೌರಾಡಳಿತ ನಿರ್ದೇಶಕರು ಸ್ಪಂದಿಸಿಲ್ಲ ಎಂದು ದೂರಿದರು.

ಏಪ್ರಿಲ್ 6 ರಂದು ರಾಜ್ಯ ಪರಿಷತ್ತಿನ ಕಾರ್ಯಕಾರಣಿ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸಲು 45 ದಿನಗಳ ಗಡುವು ನೀಡಲಾಗಿತ್ತು. ಅಲ್ಲಿಯವರೆಗೆ ಸಾಂಕೇತಿಕವಾಗಿ ಪ್ರತಿಭಟನೆ ಆರಂಭಿಸಿ ಗಡುವು ಮುಗಿದ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿತ್ತು. ನೌಕರರು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಜತೆಗೆ ಪಂಜಿನ ಮೆರವಣಿಗೆ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿತ್ತು ಎಂದರು.

ಜಿಲ್ಲಾಧ್ಯಕ್ಷ ಅಬ್ಬಾಸಲಿ ಕಾಖಂಡಕಿ, ದೇವೇಂದ್ರ ಕಟ್ಟಿಮನಿ, ಬಸವರಾಜ ಮುಂಜನ್ನಿ, ಚಂದು ಕಾಲೇಭಾಗ, ಆಸ್ಲಂ ಖಾದಿಮ, ತಹಸಿನ್‌ಬಾನು ವಾಲಿಕಾರ, ಸುಭಾನಿ ಕಸಬ, ಸದ್ದಾಂ ಶೇಖ, ಮಲ್ಲಪ್ಪ ನಡಗಡ್ಡಿ, ಮುತ್ತು ಮುರಾಳ ಮತ್ತಿತರಿದ್ದರು.

ಬೇಡಿಕೆಗಳು: ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಯೋಜನೆಗಳಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯ ನೀಡಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net