

ಹನೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬುಧವಾರ ಹನೂರು ಪಟ್ಟಣ ಪಂಚಾಯಿತಿ ಪೌರ ನೌಕರರು ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದರು.
ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಜಮಾಯಿಸಿದ ನೌಕರರು ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೌಕರರು ಮಾತನಾಡಿ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಈವರೆಗೂ ಯಾವುದೇ ಕ್ರಮವಾಗಿಲ್ಲ. ಇದರಿಂದ ಅತಂತ್ರದ ಸ್ಥಿತಿಯಲ್ಲಿ ಕಾರ್ಯನಿರ್ವಹಿಸಬೇಕಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಮನಗಂಡು ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಯುಜಿಡಿ ಸಹಾಯಕರು ಹಾಗೂ ಮೇಲ್ವಿಚಾರಕರನ್ನು ನೇರ ಪಾವತಿಗೆ ಒಳಪಡಿಸಬೇಕು. ದಿನಗೂಲಿ ನೌಕರರನ್ನು ಕಾಯಂ ಮಾಡಬೇಕು ಹಾಗೂ ಎಲ್ಲ ನೌಕರರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದಲ್ಲಿ ಬೇಡಿಕೆ ಈಡೇರುವ ತನಕ ಮುಷ್ಕರವನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ನೌಕರರಾದ ಪ್ರತಾಪ್, ಮಹೇಶ್, ಶ್ರೀನಿವಾಸ್, ಸುನೀಲ್, ಸುರೇಶ್, ರಾಕೇಶ್, ಪ್ರಭಾಕರ್, ಲಿಂಗರಾಜು, ಕೆಂಪರಾಜು, ಸಿದ್ದರಾಜು, ಶಿವಣ್ಣ, ಚಂದ್ರು, ಸೋಮು, ಮುರುಗೇಶ್, ಹರೀಶ್, ಪ್ರಸಾದ್, ರಾಮಿ, ಶೋಭಾ ಇತರರು ಇದ್ದರು.