

ಉಡುಪಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಬಡವರ್ಗಕ್ಕೆ ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟ್ಟು ಮಾತ್ರ ಹಣ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ನಲ್ಲಿ ಶೇ. 15 ರಷ್ಟು ಅನುದಾನ ಒದಗಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಹೇಳಿದರು.
ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ರಾಜ್ಯ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ ಕಂ (ಸಾರ್ವತ್ರಿಕ ಮೂಲ ಆದಾಯ) ಎಂಬ ಪರಿಕಲ್ಪನೆಯನ್ನು ತರುವ ಮೂಲಕ ಜನರ ಕೈಗೆ ನೇರವಾಗಿ ಹಣ ಕೊಡುವ ಪ್ರಯತ್ನವನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಅನುಷ್ಠಾನ ಮಾಡಲಾಯಿತು. 1.30 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರೂ. ನೀಡುವ ಮೂಲಕ ಆರ್ಥಿಕ ಬೆಳವಣಿಗೆಯ ಹೊಸ ಭಾಷ್ಯ ಬರೆಯಲಾಗಿದೆ ಎಂದು ಹೇಳಿದರು.
ಪಂಚ ಗ್ಯಾರೆಂಟಿ ಯೋಜನೆ ಪ್ರಯೋಜನ
ಶಕ್ತಿ ಯೋಜನೆ ಮೂಲಕ ರಾಜ್ಯದಲ್ಲಿ 262 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದು, ಇದಕ್ಕಾಗಿ ಒಟ್ಟು 6350.46 ಕೋಟಿ ರೂ. ಪ್ರಯಾಣದ ವೆಚ್ಚವನ್ನು ಸರ್ಕಾರ ಭರಿಸಿದೆ. ಜಿಲ್ಲೆಯಲ್ಲಿ ಜುಲೈವರೆಗೆ 1.39 ಕೋಟಿ ಮಹಿಳಾ ಪ್ರಯಾಣಿಕರು ಪ್ರಯೋಜನ ಪಡೆದಿದ್ದು, ಇದಕ್ಕಾಗಿ ಒಟ್ಟು 52.12 ಕೋಟಿ ರೂ. ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ಕೆ.ಜಿ ಗೆ 34 ರೂ. ನಂತೆ ಪ್ರತಿ ತಿಂಗಳು ತಲಾ 170 ರೂ. ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 4.08 ಕೋಟಿ ಫಲಾನುಭವಿಗಳಿಗೆ ಈವರೆಗೆ ಒಟ್ಟು 7484.38 ಕೋಟಿ ರೂ. ನೇರ ನಗದು ವರ್ಗಾವಣೆಯಡಿ ಹಣ ಪಾವತಿಸಲಾಗಿದೆ. ಜಿಲ್ಲೆಯಲ್ಲಿ 7.75 ಲಕ್ಷ ಅರ್ಹ ಫಲಾನುಭವಿಗಳಿಗೆ ಜೂನ್ ವರೆಗೆ ಒಟ್ಟು 137.12 ಕೋಟಿ ರೂ. ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಿಂದ ರಾಜ್ಯದಲ್ಲಿ 1.6 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತರಾಗಿದ್ದಾರೆ. ಸರ್ಕಾರ ಮುಂಗಡವಾಗಿ ಪ್ರತಿ ತಿಂಗಳು ಸುಮಾರು 804 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡುತ್ತಿದೆ. ಜಿಲ್ಲೆಯಲ್ಲಿ 3.20 ಲಕ್ಷ ಜನ ಈ ಸೌಲಭ್ಯ ಪಡೆಯುತ್ತಿದ್ದು, ಈವರೆಗೆ 233.56 ಕೋಟಿ ರೂ. ರಿಯಾಯಿತಿ ನೀಡಲಾಗಿದೆ. ಜಿಲ್ಲೆಯಲ್ಲಿ 2.20 ಲಕ್ಷಕ್ಕೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಲಾಭ ಪಡೆದಿದ್ದಾರೆ. ಯುವನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,028 ಯುವಜನರು ನಿರುದ್ಯೋಗ ಭತ್ಯೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ. ಈ ಬಗ್ಗೆ ಎಲ್ಲ ಇಲಾಖೆಗಳಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ ಎಂದರು.
250 ಅಂಗನವಾಡಿಗಳಲ್ಲಿ ಮಾಂಟೆಸ್ಸರಿ- ಪ್ರಾರಂಭ
ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿಗಳು ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದು, ಸರ್ಕಾರ ಅಂಗನವಾಡಿಯ ಚಿತ್ರಣವನ್ನೇ ಬದಲಾಯಿಸಲು ನಿರ್ಧರಿಸಿದೆ. ಅಂಗನವಾಡಿಗಳಲ್ಲಿ ಮಾಂಟೆಸ್ಸರಿ-ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಅಂಗನವಾಡಿಗಳನ್ನು ಪ್ರಾಯೋಗಿಕವಾಗಿ ಮಾಂಟೆಸ್ಸರಿಗಳಾಗಿ ಪರಿವರ್ತಿಸಲಾಗಿದೆ. ಮೊದಲ ಹಂತದಲ್ಲಿ ರಾಜ್ಯದ 17,800 ಅಂಗನವಾಡಿಗಳಿಗೆ ವಿಸ್ತರಿಸಲಾಗುವುದು ಎಂದರು.
ಗೃಹ ಆರೋಗ್ಯ ಶ್ರೀ
ಮನೆಯ ಬಾಗಿಲಲ್ಲೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳಿನಿಂದ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಈ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುವುದು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್ ಅಳವಡಿಕೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯ ಸರ್ಕಾರ, ಸೆಲ್ಕೋ ಇಂಡಿಯಾ ಫೌಂಡೇಶನ್, ಸೇವಾ ಸಂಸ್ಥೆಗಳ ಸಹಕಾರದಿಂದ 58 ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಉಪಕೇಂದ್ರ, ಆಯುರ್ವೇದಿಕ್ ಸೆಂಟರ್, ಮಲೇರಿಯಾ ಸೆಂಟರ್ ಗಳಲ್ಲಿ ತಲಾ ಒಂದರಂತೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ ಎಂದರು.
ಮಲ್ಪೆ ಬಂದರು ಮೇಲ್ದರ್ಜೆಗೆ
ದೇಶವು ಮೀನುಗಾರಿಕಾ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಮೂರನೇ ಸ್ಥಾನ ಪಡೆದಿದೆ. ಇದಕ್ಕೆ ಜಿಲ್ಲೆಯ ಮೀನುಗಾರರ ಕೊಡುಗೆಯು ಅಪಾರ. ಮಲ್ಪೆಯ ಸರ್ವಋತು ಮೀನುಗಾರಿಕೆ ಬಂದರನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯ ಆರಂಭಿಕ ಹಂತವಾಗಿ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಸುವ ಪ್ರಮುಖ ವಲಯಗಳಲ್ಲಿ ಒಂದಾದ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.