

ಬೆಂಗಳೂರು ಗ್ರಾಮಾಂತರ: ಆ.15 ರಂದು ನಡೆಯಲಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ಹಾಗೂ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಿಸಲಾಗುವುದು. ನಂತರ ದೇವನಹಳ್ಳಿ ಟೌನ್‌ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಇದಕ್ಕೆ ಸಂಬಂಧಪಟ್ಟಂತೆ ಜವಾಬ್ದಾರಿ ವಹಿಸಿಕೊಂಡಿರುವ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ತಿಳಿಸಿದರು.
ಧ್ವಜಕಟ್ಟೆ ಸಿದ್ದಪಡಿಸಬೇಕು:
ಜಿಲ್ಲಾಡಳಿತ ಮುಂಭಾಗ ಧ್ವಜ ಕಟ್ಟೆ ಸಿದ್ಧ ಮಾಡುವುದು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.